ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿಯಾಗಿ ಅವರೇ ಮುಂದುವರೆಯಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಗೋಕಾಕ್ನ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿಯ ಗ್ರಾಮೀಣ ಮಂಡಲ ಪ್ರಶಿಕ್ಷಣ ವರ್ಗದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಪ್ರಶ್ನೆಯೇ ಇಲ್ಲ. ಮಾಧ್ಯಮದವರೇ ಈ ಪ್ರಶ್ನೆಯನ್ನು ಪದೇ ಪದೆ ಕೇಳುತ್ತಿದ್ದೀರಿ. ಮುಖ್ಯಮಂತ್ರಿಯಾಗಿ ಅವರೇ ಇರ್ತಾರೆ ಎಂದು ಸ್ಪಷ್ಟಪಡಿಸಿದರು.
ಇನ್ನು ಶಾಲೆ ಆರಂಭಿಸುವ ಕುರಿತಂತೆ ಸರ್ಕಾರ ಇನ್ನೂ ಯಾವ ನಿರ್ಧಾರ ಕೈಗೊಂಡಿಲ್ಲ. ಈ ಬಗ್ಗೆ ಶಿಕ್ಷಣ ಸಚಿವರು, ಮುಖ್ಯಮಂತ್ರಿಗಳು ಹಾಗೂ ಸಮಾಜದ ಪ್ರಮುಖರು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆ ಶಾಲಾ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಉತ್ತಮ ನಿರ್ಧಾರವನ್ನೇ ಸರ್ಕಾರ ಕೈಗೊಳ್ಳಲಿದೆ ಎಂದರು.