ಚಿಕ್ಕೋಡಿ: ಜಿಲ್ಲೆಯಲ್ಲಿ ಈ ಬಾರಿ 2,400ಕ್ಕೂ ಅಧಿಕ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ಕಡೆ ಮುಖ ಮಾಡಿದ್ದಾರೆ ಎಂದು ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು.
ಈ ಕುರಿತು ಪ್ರತಿಕ್ರಿಯಿಸಿದ ಅವರು, ಕೊರೊನಾ ಮಹಾಮಾರಿಯಿಂದ ಅದೆಷ್ಟೋ ಬಡ ಕುಟುಂಬಗಳು ಬೀದಿಗೆ ಬಂದಿದ್ದು, ಒಂದು ಹೊತ್ತಿನ ಊಟಕ್ಕೂ ಪರಿತಪಿಸುವಂತಹ ಪ್ರಸಂಗ ಎದುರಾಗಿತ್ತು. ಕೆಲಸವಿಲ್ಲದೇ ಮನೆಯಲ್ಲಿ ಖಾಲಿ ಕುಳಿತ ಯುವಕರು ಇನ್ನೂ ಕೂಡ ಕೆಲಸ ಹುಡಕಾಟದಲ್ಲಿದ್ದಾರೆ. ಕುಟುಂಬ ನಿರ್ವಹಣೆಗೆ ದುಡ್ಡಿಲ್ಲದೇ ಪರಿತಪ್ಪಿಸಿದ್ದಾರೆ. ಹೀಗಾಗಿ ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ಕಡೆ ವಿದ್ಯಾರ್ಥಿಗಳು ಮುಖ ಮಾಡುತ್ತಿದ್ದಾರೆ ಎಂದು ಹೇಳಿದರು.
ಈಗಾಗಲೇ ವಿದ್ಯಾರ್ಥಿಗಳಿಗೆ ವಿದ್ಯಾಗಮ ಯೋಜನೆ ಮೂಲಕ ಶಿಕ್ಷಣ ನೀಡಲಾಗುತ್ತಿದ್ದು, ಆನ್ಲೈನ್ ಮೂಲಕ ಶಿಕ್ಷಣ ನೀಡುವುದರ ಜೊತೆಗೆ ಪುಸ್ತಕಗಳನ್ನು ವಿತರಣೆ ಮಾಡಲಾಗಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಂದನ ವಾಹಿನಿ ಮೂಲಕ ಪಾಠ ಬೋಧನೆ ಮಾಡಲಾತ್ತಿದೆ. ವಿದ್ಯಾರ್ಥಿಗಳಿಗೆ ಪಾಠದ ಬಗ್ಗೆ ಏನಾದರೂ ತೊಂದರೆ ಅನಿಸಿದರೆ ನೇರವಾಗಿ ಶಿಕ್ಷಕರನ್ನು ಸಂಪರ್ಕಿಸಲು ಹೇಳಲಾಗಿದೆ ಎಂದು ತಿಳಿಸಿದರು.
ಶಾಲೆಗಳಲ್ಲಿ ಮೂಲ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬಾರಿ ಸೈಕಲ್ ವಿತರಣೆ ಬಗ್ಗೆ ಮಾರ್ಗಸೂಚಿ ನೀಡಿಲ್ಲ. ಸರ್ಕಾರದ ಮಾರ್ಗಸೂಚಿ ಪ್ರಕಾರ ಮಕ್ಕಳಿಗೆ ಪಾಠ ಬೋಧನೆ ಮಾಡಲಾಗುತ್ತಿದೆ ಎಂದು ಹೇಳಿದರು.