ಬೆಳಗಾವಿ: ಪ್ರವಾಹಪೀಡಿತ ಜಿಲ್ಲೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ನಾಲ್ಕನೇ ಸಲ ಭೇಟಿ ನೀಡುತ್ತಿದ್ದಾರೆ. ಈ ಸಲ ಪ್ರವಾಹ ಪುನರ್ವಸತಿಗೆ ಡಿಸಿ ಅಕೌಂಟಿಗೆ 867 ಕೋಟಿ ಬಿಡುಗಡೆ ಮಾಡಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಿಂದ ಮಾಹಿತಿ ಹೊರಬಿದ್ದಿದೆ.
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಜಿಲ್ಲೆಯಲ್ಲಿ ಉಂಟಾದ ಪ್ರವಾಹದಿಂದ 872 ಗ್ರಾಮಗಳಲ್ಲಿ 1,12,702 ಕುಟುಂಬಗಳು ಬಾಧಿತವಾಗಿವೆ. ಪ್ರವಾಹ ಪರಿಹಾರ ಕಾರ್ಯಗಳಿಗಾಗಿ 167 ಕೋಟಿ ರೂ. ಹಾನಿಗೊಳಗಾದ ಮನೆಗಳಿಗೆ ಪರಿಹಾರ ವಿತರಿಸಲು 500 ಕೋಟಿ ರೂ. ಹಾಗೂ ಮೂಲಭೂತ ಸೌಕರ್ಯಗಳ ದುರಸ್ತಿ ಕುರಿತು 200 ಕೋಟಿ ರೂ. ಹೀಗೆ ಒಟ್ಟು 867 ಕೋಟಿ ರೂ. ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 25072 ಮನೆಗಳಿಗೆ 78.87 ಕೋಟಿ ರೂ. ಪರಿಹಾರ ಧನವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಈ ಎಲ್ಲ ಮನೆಗಳ ಪುನರ್ ನಿರ್ಮಾಣ ಹಾಗೂ ದುರಸ್ತಿಗಾಗಿ ಈಗಾಗಲೇ ಕಾರ್ಯಾದೇಶ ನೀಡಲಾಗಿದೆ. ಇನ್ನುಳಿದ ಫಲಾನುಭವಿಗಳ ದಾಖಲೆ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದ್ದು, ದಾಖಲೆ ಸರಿಯಿರುವ ಫಲಾನುಭವಿಗಳಿಗೆ ಪರಿಹಾರ ವಿತರಣೆ ಕಾರ್ಯ ಪ್ರಗತಿಯಲ್ಲಿದೆ ಎಂದು ಡಿಸಿ ತಿಳಿಸಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ 6.99 ಲಕ್ಷ ಹೆಕ್ಟೇರ್ ಪ್ರದೇಶದ ಪೈಕಿ ಪ್ರವಾಹದಿಂದ ಹಾಗೂ ಅತಿವೃಷ್ಟಿಯಿಂದ 2.21 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.