ಬೆಳಗಾವಿ: ಕಿತ್ತೂರ ಕರ್ನಾಟಕದ ಬಹುದಿನಗಳ ಬೇಡಿಕೆಯಂತೆ ಈ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸಲಾಗುತ್ತಿದೆ. ಸರ್ಕಾರ ಎರಡು ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿರುತ್ತದೆ. ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ವೀರಜ್ಯೋತಿಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಕ್ಟೋಬರ್ 2 ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಮಹಾಂತೇಶ್ ದೊಡ್ಡಗೌಡ ತಿಳಿಸಿದರು.
ಚೆನ್ನಮ್ಮನ ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣಮಂಟಪದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚೆನ್ನಮ್ಮ ಉತ್ಸವ ರಾಜ್ಯಮಟ್ಟದ ಉತ್ಸವವಾಗಿ ಆಚರಣೆ, ರಾಜ್ಯದಾದ್ಯಂತ ವೀರಜ್ಯೋತಿಯಾತ್ರೆ ಸಂಚಾರ ಸೇರಿದಂತೆ ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಡೇರಿಸಿದ್ದಾರೆ ಎಂದರು.
ಅಕ್ಟೋಬರ್ 2 ರಂದು ಮುಖ್ಯಮಂತ್ರಿಗಳು ಸ್ವತಃ ವೀರಜ್ಯೋತಿಯಾತ್ರೆಗೆ ಚಾಲನೆ ನೀಡಲಿದ್ದಾರೆ. ವೀರಜ್ಯೋತಿಯಾತ್ರೆಯನ್ನು ಎಲ್ಲ ಜಿಲ್ಲೆಗಳಲ್ಲಿ ಅತ್ಯಂತ ಗೌರವಯುತವಾಗಿ ಸ್ವಾಗತಿಸಿ ಬೀಳ್ಕೊಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಆದೇಶ ನೀಡಲಿದೆ. ಪ್ರತಿಯೊಬ್ಬರು ಸ್ವಯಂಪ್ರೇರಣೆಯಿಂದ ಉತ್ಸವದಲ್ಲಿ ಭಾಗವಹಿಸುವ ಮೂಲಕ ಕಿತ್ತೂರು ಉತ್ಸವವನ್ನು ಸಂಭ್ರಮದಿಂದ ಆಚರಿಸೋಣ ಎಂದು ಮನವಿ ಮಾಡಿಕೊಂಡರು.
ಮೂರು ವೇದಿಕೆ-ವಿಶಿಷ್ಟ ವಸ್ತುಪ್ರದರ್ಶನ: ಈ ಬಾರಿ ಉತ್ಸವದಲ್ಲಿ ಮೂರು ವೇದಿಕೆ ನಿರ್ಮಿಸಲಾಗುವುದು. ಮಹಿಳೆಯರಿಗಾಗಿ ಒಂದು ದಿನ ಮೀಸಲಿಡಲು ನಿರ್ಧರಿಸಲಾಗಿದೆ. ಇದೇ ರೀತಿ ವಿವಿಧ ಬಗೆಯ ಕ್ರೀಡೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ದೊರಕಲಿದೆ. ಆಹಾರ, ಫಲಪುಷ್ಪ ಪ್ರದರ್ಶನ ಸೇರಿದಂತೆ ವಿವಿಧ ಬಗೆಯ ವಸ್ತು ಪ್ರದರ್ಶನ ಮೇಳ ಆಯೋಜಿಸುವ ಕುರಿತು ಚರ್ಚೆ ನಡೆಸಲಾಗಿದೆ. ಅಲ್ಲದೇ ಮೂರು ದಿನಗಳ ಕಾಲ ಅತ್ಯುತ್ತಮ ದೀಪಾಲಂಕಾರ ಮಾಡಲು ಟೆಂಡರ್ ನೀಡಲಾಗುವುದು ಎಂದು ತಿಳಿಸಿದರು.
ಉತ್ಸವ ಯಶಸ್ವಿಗೆ ಪೂರ್ವಸಿದ್ಧತೆ ಆರಂಭ: ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಕಿತ್ತೂರು ಉತ್ಸವ ರಾಜ್ಯಮಟ್ಟದ ಉತ್ಸವವಾಗಿ ಘೋಷಣೆಯಾಗಿದೆ. ಈ ಬಾರಿ ಎರಡು ಕೋಟಿ ರೂಪಾಯಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಮೊದಲ ಬಾರಿ ರಾಜ್ಯಮಟ್ಟದ ಉತ್ಸವವನ್ನಾಗಿ ಸಂಭ್ರಮದಿಂದ ಅಚರಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದರು.
ಚೆನ್ನಮ್ಮ ಜನ್ಮಸ್ಥಳ ಅಭಿವೃದ್ಧಿಗೆ ಕ್ರಮ: ಕಾಕತಿಯಲ್ಲಿರುವ ಚೆನ್ನಮ್ಮನ ಜನ್ಮಸ್ಥಳವಾಗಿರುವ ವಾಡೆ ಖರೀದಿಸಲು ಸರ್ಕಾರ 30 ಲಕ್ಷ ಅನುದಾನ ಒದಗಿಸಿದೆ. ಇದರ ವಾರಸುದಾರರು ಬೇರೆ ಕಡೆ ಇದ್ದು, ಅವರೊಂದಿಗೆ ಚರ್ಚೆ ನಡೆದಿದೆ. ಆದಷ್ಟು ಬೇಗನೇ ಆ ಜಾಗವನ್ನು ಖರೀದಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಇದನ್ನೂ ಓದಿ : ದಾವಣಗೆರೆ: ದುರ್ಗಾ ದೇವಿ ವೇಷದಲ್ಲಿ ಕಣ್ಮನ ಸೆಳೆಯುತ್ತಿದ್ದಾರೆ ಆರ್ಟಿಸ್ಟ್ ರೂಪಾ