ಬೆಳಗಾವಿ: ''ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾ ಸುಳ್ಳುಗಾರ. ಅವರು ಅಲ್ಪಸಂಖ್ಯಾತರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಾರೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತೆರಳುವ ಮುನ್ನ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಯತ್ನಾಳ್ ಅವರ ಹೇಳಿಕೆ ವಿರುದ್ಧ ಕಿಡಿಕಾರಿದರು. ವಿರೋಧ ಪಕ್ಷದ ನಾಯಕನ ಸ್ಥಾನ ಹಾಗೂ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಯತ್ನಾಳ್ ಪ್ರಯತ್ನಿಸಿದ್ದರು. ಎರಡೂ ಹುದ್ದೆಗಳು ಸಿಗದಿರುವ ಕಾರಣ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಮೌಲ್ವಿ ಸೈಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ ಜೊತೆಗೆ ವೇದಿಕೆ ಹಂಚಿಕೊಂಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಹಾಶ್ಮಿ ಅವರು ದರ್ಗಾದ ಧರ್ಮಾಧಿಕಾರಿ, ಅವರೊಂದಿಗೆ ಬಹಳ ವರ್ಷಗಳಿಂದ ಒಡನಾಟ ಇದೆ ಎಂದರು. ಯತ್ನಾಳ್ ಒಬ್ಬ ಮಹಾ ಸುಳ್ಳುಗಾರ ಎಂದು ಕುಟುಕಿದ ಸಿಎಂ, ಹಾಶ್ಮಿ ಅವರ ಮೇಲಿನ ಆರೋಪ ಸಾಬೀತು ಮಾಡಲಿ ಎಂದು ಸವಾಲು ಹಾಕಿದರು. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವೇ 10 ವರ್ಷಗಳಿಂದ ಆಡಳಿತದಲ್ಲಿದೆ. ಮೌಲ್ವಿ ಹಾಶ್ಮಿ ಅವರಿಗೆ ಉಗ್ರಗಾಮಿಗಳ ಸಂಘಟನೆ ಜೊತೆ ನಂಟು ಇರುವ ಆರೋಪದ ಬಗ್ಗೆ ತನಿಖೆ ನಡೆಸಲಿ ಎಂದರು.
ದಕ್ಷಿಣ ಭಾರತದಲ್ಲಿ ಬಿಜೆಪಿ ಇಲ್ಲ ಎಂದ ಸಿಎಂ: ದಕ್ಷಿಣ ಭಾರತದಲ್ಲಿ ಬಿಜೆಪಿ ವಿಸ್ತರಣೆ ಆಗುತ್ತಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ದಕ್ಷಿಣ ಭಾರತದಲ್ಲಿ ಬಿಜೆಪಿ ವಿಸ್ತರಣೆಯಾಗುವುದು ಇರಲಿ, ಪಕ್ಷಕ್ಕೆ ಅಸ್ತಿತ್ವವೇ ಇಲ್ಲವೆಂದು ಟೀಕಿಸಿದರು.
ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಹಣ ಬೇರೆಡೆಗೆ ಉಪಯೋಗವಾಗುತ್ತಿರುವ ಬಗ್ಗೆ ಮಾಡಿದ ಆರೋಪದ ಬಗ್ಗೆ ಉತ್ತರಿಸಿದ ಸಿದ್ದರಾಮಯ್ಯ, ಬಿಜೆಪಿ ಆಡಳಿತದ ಕಾಲದಲ್ಲಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಅನುದಾನ ಯಾಕೆ ಕಡಿಮೆಯಾಯಿತು? ಎಂದು ಉತ್ತರ ಕೊಡಬೇಕೆಂದು ಹೇಳಿದರು. ಈ ಹಿಂದೆ 2018ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ತಾವು ಕಡೆ ಬಜೆಟ್ ಮಂಡಿಸಿದ್ದ ವೇಳೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ 30 ಸಾವಿರ ಕೋಟಿ ರೂ.ಗಳ ಅನುದಾನ ನೀಡಲಾಗಿತ್ತು. ಬಿಜೆಪಿ ಸರ್ಕಾರದ ಆಡಳಿತದ ಕಾಲದಲ್ಲಿ 25 ಸಾವಿರ ಕೋಟಿ ರೂ. ಅನುದಾನ ನೀಡಲಾಗಿತ್ತು. ಇದಕ್ಕೆ ಕಾರಜೋಳ ಅವರೇ ಉತ್ತರ ಕೊಡಬೇಕು ಎಂದು ಸಿಎಂ ತಿಳಿಸಿದರು.
ಇದನ್ನೂ ಓದಿ: 10 ಸಾವಿರ ಕೋಟಿ ಅನುದಾನ ಹೇಳಿಕೆ ವಿಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಹೀಗಿದೆ