ಚಿಕ್ಕೋಡಿ : ನಾಳೆ ಅಥಣಿ ತಾಲೂಕಿನ ಕೋಕಟನೂರ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಇಲಾಖೆಗಳ ಸಚಿವರು ಆಗಮಿಸಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವರು ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಮಾಹಿತಿ ನೀಡಿದರು.
ಬೆಳಗಾವಿ ಜಿಲ್ಲೆಯ ಕೋಕಟನೂರ ಗ್ರಾಮದಲ್ಲಿಂದು ಕಾರ್ಯಕ್ರಮದ ರೂಪುರೇಷೆ ಹಾಗೂ ವೇದಿಕೆ ನಿರ್ಮಾಣ ಕಾರ್ಯ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಗಸ್ಟ್ 11ರಂದು 10:30ಕ್ಕೆ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಪಶು ಸಂಗೋಪನಾ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್, ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು ಆಗಮಿಸುತ್ತಿದ್ದಾರೆ ಎಂದರು.
ಕೋಕಟನೂರ ಗ್ರಾಮದಲ್ಲಿ 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಶು ವೈದ್ಯಕೀಯ ಮಹಾವಿದ್ಯಾಲಯ ಉದ್ಘಾಟನೆ ಹಾಗೂ ನೂತನವಾಗಿ ನಿರ್ಮಾಣವಾಗುತ್ತಿರುವ ಆರ್.ಟಿ.ಒ ಕಚೇರಿ, ಕೆಎಸ್‌ಆರ್‌ಟಿಸಿ ಡಿಪೊ, ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್, (ಕೊಕಟನೂರ), ಸತ್ತಿ ಮತ್ತು ಇತರ ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ ಅಡಿಗಲ್ಲು, ಚಿಕ್ಕೋಡಿ ಮತ್ತು ಇತರ ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆಗೆ ಅಡಿಗಲ್ಲು, ಅಥಣಿ ಪಟ್ಟಣದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಮೂರ್ತಿ ಅನಾವರಣ, ಶ್ರೀ ಸಿದ್ದರಾಮೇಶ್ವರ ನೀರಾವರಿ ಯೋಜನೆ (ವಡ್ಡರ ಸಮಾಜ) ಉದ್ಘಾಟನೆ, ತೆಲಸಂಗದ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಉದ್ಘಾಟನೆ, ವಾಲ್ಮೀಕಿ ಸಮುದಾಯ ಭವನ ಉದ್ಘಾಟನೆ-ಅಥಣಿ ನಗರ ಕಟ್ಟಡ ಉದ್ಘಾಟನೆ, ಸಹಕಾರಿ ಪಶು ಗೋ ಶಾಲೆ ಉದ್ಘಾಟನೆ ಸೇರಿದಂತೆ ಹಲವು ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹೇಳಿದರು.
13 ವರ್ಷದ ಬಳಿಕ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಉದ್ಘಾಟನೆ ಭಾಗ್ಯ: 2008ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಕೋಕಟನೂರ ಗ್ರಾಮಕ್ಕೆ ಆಗಮಿಸಿದ್ದ ಸಮಯದಲ್ಲಿ ಈ ಭಾಗದಲ್ಲಿ ರೈತರ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಪಶು ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ನಂತರ ಸಿಎಂ ಆಗಿ ಆಯ್ಕೆಯಾದ ಬಳಿಕ 2011ರಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಮೊದಲ ಹಂತವಾಗಿ 36 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದ್ದರು.
2013ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಮಗಾರಿ ಆಮೆಗತಿಯಲ್ಲಿ ಸಾಗುತಿತ್ತು. 2018ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮತ್ತೆ ಅನುದಾನ ಬಿಡುಗಡೆ ಮಾಡಿ, ಕಾಮಗಾರಿಗೆ ಚುರುಕು ನೀಡಿದರು. ಮೂರು ಹಂತದ ಕಾಮಗಾರಿ ಈಗಾಗಲೇ ಮುಗಿದು ಸುಸಜ್ಜಿತ ಕಾಲೇಜು ಕಟ್ಟಡ, ಹಾಸ್ಟೆಲ್, ಶಿಕ್ಷಕರ ವಸತಿ ನಿಲಯ, ಪ್ರಯೋಗಾಲಯ ಹೀಗೆ ಒಟ್ಟು 80 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಮುಗಿದಿದೆ. ನಾಲ್ಕನೇ ಹಂತ ಕಾಮಗಾರಿ 30 ಕೋಟಿ ರೂಪಾಯಿ ಬಾಕಿ ಉಳಿದು 2024ರಲ್ಲಿ ಕಾಮಗಾರಿ ಪೂರ್ಣವಾಗುವುದು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಇದನ್ನೂ ಓದಿ: ಗುತ್ತಿಗೆದಾರರನ್ನು ಮಾಧ್ಯಮದವರೆದುರು ಯಾರು ಕಳಿಸುತ್ತಿದ್ದಾರೆ ಅಂತ ಗೊತ್ತಿದೆ : ಡಿಕೆಶಿ