ಬೆಳಗಾವಿ: ವಿಶ್ವ ಹಿಂದೂ ಪರಿಷತ್, ಬಜರಂಗದಳ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಆಗಮಿಸುತ್ತಿದ್ದ ಸ್ವಾಮೀಜಿಯವರ ಕಾರಿಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಸ್ವಾಮೀಜಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಬಾಚಲಿ ಗ್ರಾಮದ ನಿವಾಸಿ ಪಾಂಡುರಂಗ ಜಾಧವ್ (76), ಹುಕ್ಕೇರಿ ತಾಲೂಕಿನ ಪರಕನಟ್ಟಿ ಗ್ರಾಮದ ನಿವಾಸಿ ಕಾರು ಚಾಲಕ ಪಂಚಾಕ್ಷರಿ ಹಿರೇಮಠ ಮೃತ ದುರ್ದೈವಿಗಳು. ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರವಾಗಿ ಗಾಯಗೊಂಡವರು.
ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿಸಿ ಇಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಸ್ವಾಮೀಜಿ ಕಾರಿನಲ್ಲಿ ಆಗಮಿಸುತ್ತಿದ್ದರು. ಮಾರ್ಗ ಮಧ್ಯ ಕಾಕತಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಕಂಟೇನರ್ ಮಧ್ಯ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರ ಭೇಟಿ ನೀಡಿದ್ದು, ಕಾಡಸಿದ್ಧೇಶ್ವರ ಸ್ವಾಮೀಜಿ ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಜಿಲ್ಲಾಸ್ಪತ್ರೆಯ ಐಸಿಯುದಲ್ಲಿ ಕಾಡಸಿದ್ಧೇಶ್ವರ ಸ್ವಾಮೀಜಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ವಾಮೀಜಿ ಸೇವಕರಿಬ್ಬರ ಮೃತದೇಹಗಳನ್ನು ಬೀಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವಾಮೀಜಿ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇವೆ. ಹಿಂದೂಪರ ಸಂಘಟನೆ ಕಾರ್ಯಕರ್ತರು ಹಣ ಒಟ್ಟುಗೂಡಿಸಿ ಸ್ವಾಮೀಜಿಗೆ ಚಿಕಿತ್ಸೆ ಕೊಡಿಸುತ್ತೇವೆ ಎಂದು ಬೆಳಗಾವಿಯಲ್ಲಿ ವಿಹೆಚ್‌ಪಿ ಮುಖಂಡ ಕೃಷ್ಣ ಭಟ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ರಾಮನಗರ: ಮನಕಲಕುವಂತಿದೆ ಅಪಘಾತಕ್ಕೂ ಮುಂಚಿನ ಗೆಳೆಯರ ಕುಚುಕು ವಿಡಿಯೋ..