ಬೆಳಗಾವಿ: ಜಿಲ್ಲೆಯ 2 ಸ್ಥಾನಗಳಿಗೆ ವಿಧಾನಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ ಆಗಿದೆ. ಈ ಸಂಬಂಧ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಪ್ರತಿಕ್ರಿಯಿಸಿದರು.
ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ಟಿಕೆಟ್ ನೀಡುವಂತೆಯೂ ಕೇಳಿದ್ದೇನೆ. ಕಳೆದ ಆರು ತಿಂಗಳಿನಿಂದ ಚುನಾವಣೆಗೆ ತಯಾರಿ ನಡೆಸಿದ್ದು, ಜಿಲ್ಲೆಯ 14 ತಾಲೂಕಿಗೂ ಭೇಟಿ ನೀಡಿ, ನನ್ನನ್ನು ಬೆಂಬಲಿಸುವಂತೆ ಎಲ್ಲರಲ್ಲೂ ಕೋರಿದ್ದೇನೆ. ಸಿದ್ದರಾಮಯ್ಯ, ಡಿಕೆಶಿ, ಸತೀಶ್ ಜಾರಕಿಹೊಳಿ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ. ಟಿಕೆಟ್ ಹಂಚಿಕೆಯಲ್ಲಿ ಈ ಮೂವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಮ್ಮ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಿದ್ದೇನೆ ಎಂದರು.
ಪರಿಷತ್ ಚುನಾವಣೆಗೆ 6 ತಿಂಗಳಿನಿಂದ ಸಿದ್ಧತೆ ಮಾಡಿಕೊಂಡಿದ್ದೇನೆ. ಹಾಲಿ ಸದಸ್ಯರ ಬಗ್ಗೆ ಜಿಲ್ಲೆಯ ಜನರಲ್ಲಿ ಬೇಸರ ಇದೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ಮತ ಕೇಳಲು ಬರುತ್ತಾರೆ. ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಇವರು ಸ್ಪಂದಿಸುವುದಿಲ್ಲ ಎಂಬ ಆರೋಪಗಳಿವೆ. ಹೀಗಾಗಿ ಇಬ್ಬರು ಸದಸ್ಯರ ವಿರುದ್ಧ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ಸಿಟ್ಟಿದೆ. ಇದು ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ವರದಾನವಾಗಲಿದೆ.
ಸ್ಥಳೀಯ ಸಂಸ್ಥೆಗಳ ಎಲ್ಲ ಜನಪ್ರತಿನಿಧಿಗಳಿಗೂ ಭೇಟಿಯಾಗಿದ್ದೇನೆ. ಟಿಕೆಟ್ ಯಾರಿಗೆ ಸಿಕ್ಕರೂ ಅವರ ಪರ ನಾನು ಶ್ರಮಿಸುತ್ತೇನೆ. ವಿವೇಕರಾವ್ ಪಾಟೀಲ ಕಾಂಗ್ರೆಸ್ ಟಿಕೆಟ್ ಕೇಳುತ್ತಿರುವುದರಲ್ಲಿ ತಪ್ಪಿಲ್ಲ. ಆದರೆ ಎರಡು ಸ್ಥಾನಗಳ ಪೈಕಿ ಒಂದರಲ್ಲಿ ಮಾತ್ರ ಕಾಂಗ್ರೆಸ್ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಸಲ ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಕ್ಕರೂ ಗೆದ್ದು ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.