ಬೆಳಗಾವಿ: ಕೋವಿಡ್-19ಗೆ ಸಂಬಂಧಿಸಿದ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ಚಾಲನೆ ನೀಡಿದರು.
ಇಲ್ಲಿನ ನೆಹರೂ ನಗರದ ಕೆ.ಎಲ್.ಇ. ಆಸ್ಪತ್ರೆ ಎದುರಿರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ "ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ"ಯ ಆವರಣದಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯ ಆರಂಭಿಸಲಾಗಿದೆ. ಸದ್ಯ ನಿತ್ಯ 90 ಮಾದರಿಗಳನ್ನು ಪರೀಕ್ಷಿಸುವ ಸಾಮರ್ಥ್ಯವನ್ನು ಈ ಪ್ರಯೋಗಾಲಯ ಹೊಂದಿರುತ್ತದೆ.
ಈ ವೇಳೆ, ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಡಿಸಿಎಂ ಲಕ್ಷ್ಮಣ ಸವದಿ, ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕ ಸತೀಶ್ ಜಾರಕಿಹೊಳಿ, ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ಅನಿಲ್ ಬೆನಕೆ, ಅಭಯ್ ಪಾಟೀಲ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಕೋವಿಡ್-19 ನಿಯಂತ್ರಣಾ ಕ್ರಮಗಳ ಉಸ್ತುವಾರಿ ರಾಜೇಂದ್ರ ಚೋಳನ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ, ಐಸಿಎಂಆರ್ - ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ದೇವಪ್ರಸಾದ ಚಟ್ಟೋಪಾಧ್ಯಾಯ, ಮತ್ತಿತರರು ಉಪಸ್ಥಿತರಿದ್ದರು. ಪ್ರಯೋಗಾಲಯದ ನೋಡಲ್ ಅಧಿಕಾರಿಯಾಗಿರುವ ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆಯ ಉಪ ನಿರ್ದೇಶಕ ಡಾ.ಬನ್ನಪ್ಪ ಹಾಗೂ ವಿಜ್ಞಾನಿಗಳು ಕೂಡಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.