ಬೆಳಗಾವಿ: ಕೊರೊನಾ 2ನೇ ಅಲೆ ವ್ಯಾಪಿಸುತ್ತಿರುವ ಬೆನ್ನಲ್ಲೇ ಗಡಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಕೋವಿಡ್ ಹರಡುವಿಕೆ ತಡೆಗಟ್ಟಲು ಅಂತರ್ರಾಜ್ಯ ಗಡಿಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ನೆರೆ ರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ತಪಾಸಣಾ ವರದಿ ನೀಡಬೇಕು ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬ, ಉತ್ಸವಕ್ಕೆ ನಿರ್ಬಂಧ
ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬ, ಉತ್ಸವಗಳ ಆಚರಣೆಯನ್ನು ನಿರ್ಬಂಧಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಅದನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಡಿಸಿ ತಿಳಿಸಿದರು.
ಎಲ್ಲಾ ರೀತಿಯ ಹಬ್ಬಾಚರಣೆಗಳನ್ನು ಮನೆಯಲ್ಲಿಯೇ ಆಚರಿಸಬೇಕು. ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ನಿಗದಿತ ಜನರಿಗಿಂತ ಹೆಚ್ಚು ಜನರು ಸೇರಿದರೆ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಭಾರತ್ ಬಂದ್‌ಗೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ