ಬೆಳಗಾವಿ: ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸೋಂಕಿತರ ಜತೆ ಸಮಾಲೋಚನೆ ನಡೆಸಿದರು.
ಬಳಿಕ ಕಿತ್ತೂರು, ಎಂ.ಕೆ.ಹುಬ್ಬಳ್ಳಿ, ನೇಗಿನಾಳ ಹಾಗೂ ಹೂಲಿಕಟ್ಟಿ ಗ್ರಾಮಗಳಿಗೆ ಭೇಟಿ ನೀಡಿದ ಡಿಸಿ ಕೋವಿಡ್ ಪರೀಕ್ಷೆ, ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜತೆ ಸಭೆಗಳನ್ನು ನಡೆಸಿದರು.
ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸಾಂತ್ವನ:
ಬೈಲಹೊಂಗಲ ತಾಲೂಕಿನಲ್ಲಿ ಅತೀ ಹೆಚ್ಚು ಸೋಂಕು ಕಂಡುಬಂದಿರುವ ನೇಗಿನಾಳ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಸೋಂಕಿನಿಂದ ಮೃತಪಟ್ಟಿರುವ ವ್ಯಕ್ತಿಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಆ ಕುಟುಂಬದ ಎಲ್ಲ ಸದಸ್ಯರಿಗೂ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ (ರ್ಯಾಟ್) ಮಾಡಿಸಿದರು.
ಇದಾದ ಬಳಿಕ ನೇಗಿನಾಳ ಗ್ರಾಮದ ಬಳಿ ಆರಂಭಿಸಲಾಗಿರುವ ಕೋವಿಡ್ ಕೇರ್ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹಿರೇಮಠ ಅವರು, ಅಲ್ಲಿ ದಾಖಲಾಗಿರುವ ಲಕ್ಷಣರಹಿತ ಸೋಂಕಿತರ ಜತೆ ಮಾತುಕತೆ ನಡೆಸಿ, ಅವರಿಗೆ ಮನೋಬಲ ತುಂಬಿದರು. ಬಳಿಕ ನೇಗಿನಾಳ ಗ್ರಾಮ ಪಂಚಾಯತಿಯಲ್ಲಿ ಪಂಚಾಯತಿ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಭೆಯನ್ನು ನಡೆಸಿದರು.
ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತದಿಂದ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸೋಂಕಿತರನ್ನು ಪತ್ತೆ ಮಾಡಿ ತಕ್ಷಣವೇ ಅವರಿಗೆ ಚಿಕಿತ್ಸೆ ನೀಡಲು ಹಾಗೂ ಆರೈಕೆ ಕೇಂದ್ರಗಳಿಗೆ ಕಳಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೋವಿಡ್ ಪತ್ತೆಗಾಗಿ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ನಡೆಸಲಾಗುತ್ತಿದೆ. ಕೆಮ್ಮು, ಶೀತ, ಜ್ವರದಿಂದ ಬಳಲುತ್ತಿರುವವರು ಹಾಗೂ ಕೋವಿಡ್ ಲಕ್ಷಗಳನ್ನು ಹೊಂದಿರುವವರು ಸ್ವಯಂಪ್ರೇರಣೆಯಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕಡ್ಡಾಯವಾಗಿ ಆರೈಕೆ ಕೇಂದ್ರಕ್ಕೆ ದಾಖಲಿಸಲು ಸೂಚನೆ:
ರ್ಯಾಟ್ನಲ್ಲಿ ಕೋವಿಡ್ ಸೋಂಕು ದೃಢಪಟ್ಟರೆ ಅಂತಹ ವ್ಯಕ್ತಿಗಳನ್ನು ತಕ್ಷಣವೇ ಸಮೀಪದ ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸುವ ಮೂಲಕ ಸರಕಾರದ ಮಾರ್ಗಸೂಚಿ ಪ್ರಕಾರ ಔಷಧೋಪಚಾರ ಒದಗಿಸಬೇಕು ಎಂದು ಆರೋಗ್ಯ ಇಲಾಖೆಯ ಸ್ಥಳೀಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದರು.
ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಕರಿಸಲು ಮನವಿ:
ಕೋವಿಡ್ ಪತ್ತೆ ಹಾಗೂ ನಿಯಂತ್ರಣಕ್ಕೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಶ್ರಮಿಸುತ್ತಿರುವುದರಿಂದ ಆರೋಗ್ಯ ಸಮೀಕ್ಷೆ ಮತ್ತು ಸಂಪರ್ಕಿತರ ಮಾಹಿತಿಯನ್ನು ಪಡೆಯಲು ಮನೆ ಮನೆಗೆ ಬಂದಾಗ ಅವರಿಗೆ ಮಾಹಿತಿಯನ್ನು ನೀಡಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡರು.