ಬೆಳಗಾವಿ: ನೆರೆಯ ರಾಜ್ಯಗಳು ಮತ್ತು ಬೆಂಗಳೂರಿನಿಂದ ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಸರ್ಕಾರದ ನಿರ್ದೇಶನದ ಮೇರೆಗೆ ಅಂತಹವರಿಗೆ ಸಾಮೂಹಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಿ ಉಟೋಪಹಾರವನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸೂಚನೆ ನೀಡಿದರು.
ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಅಧಿಕಾರಿಗಳ ಜತೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಖಾನಾಪುರ, ನಿಪ್ಪಾಣಿ, ಚಿಕ್ಕೋಡಿ, ಬೆಳಗಾವಿ ಸೇರಿದಂತೆ ಜಿಲ್ಲೆಯ ಎಲ್ಲ ಗಡಿ ತಾಲೂಕುಗಳಲ್ಲಿ ವಲಸೆ ಕಾರ್ಮಿಕರು ಕಂಡುಬರುತ್ತಿದೆ.
ಆಯಾ ತಾಲೂಕುಗಳಲ್ಲಿ ಲಭ್ಯವಿರುವ ಸರ್ಕಾರಿ ಕಟ್ಟಡಗಳು, ಸಮುದಾಯ ಭವನ, ವಸತಿನಿಲಯಗಳು, ಚೌಲ್ಟ್ರಿ ಮತ್ತಿತರ ಕಟ್ಟಡಗಳಲ್ಲಿ ಅವರಿಗೆ ಊಟ-ವಸತಿ ಕಲ್ಪಿಸುವುದರ ಜತೆಗೆ ನೀರು, ಶೌಚಾಲಯ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.
ಸಾಮೂಹಿಕ ಕ್ವಾರಂಟೈನ್ ಕೇಂದ್ರಗಳಿಗೆ ಒಬ್ಬ ನೋಡಲ್ ಅಧಿಕಾರಿ, ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ಇದಕ್ಕೆ ಅಗತ್ಯವಿರುವ ಅನುದಾನವನ್ನು ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ತಕ್ಷಣವೇ ಬಿಡುಗಡೆ ಮಾಡಲಾಗುವುದು ಎಂದರು.
ಈ ಮುಂಚೆ ಅವಶ್ಯಕ ಸಾಮಗ್ರಿಗಳ ಸರಕು ಸಾಗಾಣಿಕೆ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಸರ್ಕಾರದ ಹೊಸ ಆದೇಶದ ಪ್ರಕಾರ ಎಲ್ಲ ಬಗೆಯ ಸರಕು ಸಾಗಣೆಯ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಆದರೆ ಇಂತಹ ವಾಹನಗಳಲ್ಲಿ ಜನರ ಸಾಗಾಣಿಕೆಯನ್ನು ಕಡ್ಡಾಯವಾಗಿ ನಿರ್ಬಂಧಿಸಬೇಕು ಎಂದು ಪೊಲೀಸ್ ಅಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಸೂಚನೆ ನೀಡಿದರು.
ಇದಕ್ಕೂ ಮುನ್ನ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು,ದಿನಬಳಕೆಯ ಹಾಗೂ ಅತ್ಯಾವಶ್ಯಕ ಸಾಮಗ್ರಿಗಳ ಸಾಗಾಣಿಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಬೇಕು. ಗರ್ಭಿಣಿಯರು, ಬಾಣಂತಿಯರು ಸೇರಿದಂತೆ ಎಲ್ಲ ಬಗೆಯ ತುರ್ತು ವೈದ್ಯಕೀಯ ಸೇವೆಗಳಿಗೆ ಹಾಗೂ ಅಂತಹ ಜನರನ್ನು ಕರೆದುಕೊಂಡು ಹೋಗುವ ವಾಹನಗಳಿಗೂ ತಡೆಯೊಡ್ಡಬಾರದು ಎಂದು ತಿಳಿಸಿದರು.