ಬೆಳಗಾವಿ: ನಾನು ಜಾತಿಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಜಾತಿಗಣತಿಯ ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಮತ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದಲ್ಲಿ ಜಾತಿಗಣತಿ ಜಾರಿ ವಿಚಾರವಾಗಿ ಡಿ ಕೆ ಶಿವಕುಮಾರ್ ಹಾಗೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಬಗ್ಗೆ ಪ್ರಶ್ನೆಗೆ ಬೆಳಗಾವಿಯ ಸುವರ್ಣಸೌಧದ ಬಳಿ ಉತ್ತರಿಸಿದ ಡಿಕೆಶಿ, ಜಾತಿಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಾನೂ ಸೇರಿದಂತೆ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ, ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂದು ದೂರುಗಳು ಬಂದಿವೆ. ಹೀಗಾಗಿ ವ್ಯವಸ್ಥಿತ ಸಮೀಕ್ಷೆಗೆ ಒತ್ತಾಯಿಸಿದ್ದೇವೆ ಎಂದರು.
ಸಾಮಾಜಿಕ ನ್ಯಾಯ ಸಿಗಲಿ: ಎಲ್ಲ ಸಮುದಾಯಗಳು ಅವರ ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕನ್ನು ಪಡೆಯಬೇಕು. ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ. ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಲಾಗಿದೆಯೇ ಎಂಬ ವಿಚಾರವಾಗಿ ನಾವು ಸ್ಪಷ್ಟೀಕರಣ ಕೇಳಿದ್ದೇವೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಕೇಂದ್ರ ಸರ್ಕಾರದ ವರ್ಗೀಕರಣದ ಅನ್ವಯ ನಾನು ಕೂಡ ಇತರೆ ಹಿಂದುಳಿದ ವರ್ಗದ ಸಮುದಾಯದ ನಾಯಕ. ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು ಎಂದು ಡಿಕೆಶಿ ಹೇಳಿದರು.
ಜಾತಿ ಗಣತಿಯ ಕೆಲವು ದಾಖಲೆಗಳು ಕಾಣೆಯಾಗಿರುವ ಬಗ್ಗೆ ವರದಿಗಳಿವೆ ಎಂದು ಕೇಳಿದಾಗ, ಈ ವಿಚಾರ ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಮಾತನಾಡಿದ್ದು, ವರದಿಗೆ ಕಾರ್ಯದರ್ಶಿಗಳ ಸಹಿ ಇಲ್ಲವೆಂಬ ಮಾಹಿತಿ ಪಡೆದಿದ್ದೇನೆ. ಕಾರ್ಯದರ್ಶಿಗಳ ಸಹಿ ಇಲ್ಲದೇ ಅದು ಹೇಗೆ ಸಿಂಧುವಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದು ಹೇಳಿದರು.
ಬೇರೆ ಪಕ್ಷಕ್ಕೆ ಹೋಗಲ್ಲ: ಲೋಕಸಭೆ ಚುನಾವಣೆ ನಂತರ ಪ್ರಭಾವಿ ಸಚಿವರು 50-60 ಶಾಸಕರ ಸಮೇತ ಬಿಜೆಪಿ ಸೇರುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ನಿಮ್ಮನ್ನೇ ಗುರಿ ಮಾಡಿರುವಂತಿದೆ ಎಂದು ಕೇಳಿದಾಗ, ನಾನು ಹುಟ್ಟುತ್ತಲೇ ಕಾಂಗ್ರೆಸ್ಸಿಗ. ಬೇರೆ ಪಕ್ಷಕ್ಕೆ ಹೋಗಲ್ಲ. ನನಗೆ ನನ್ನದೇ ಆದ ಮೂಲ ಆದರ್ಶಗಳಿವೆ. ನನಗೆ ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಅಪಾರವಾದ ನಂಬಿಕೆ ಇದೆ ಎಂದು ತಿಳಿಸಿದರು. ಅವರು (ಕುಮಾರಸ್ವಾಮಿ) ಮಾತನಾಡಿದ್ದಕ್ಕೆಲ್ಲ ನಾನು ಬಾಧ್ಯಸ್ಥನಲ್ಲ. ಅವರು ಏನಾದರೂ ಹೇಳಿಕೊಂಡು ತಿರುಗಲಿ, ಆ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಕಲಾಪದಲ್ಲಿ ಉತ್ತರ ಕರ್ನಾಟಕ ಚರ್ಚೆ: ನೀರಾವರಿ ಸಮಸ್ಯೆ ಬಗ್ಗೆ ಸರ್ಕಾರ ಗಮನ ಹರಿಸಲಿ- ಯತ್ನಾಳ್