ಬೆಳಗಾವಿ: ಜಿಲ್ಲೆಯ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿ, ಮಹಾರಾಷ್ಟ್ರದಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿರುವ ಪರಿಣಾಮ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಜೊತೆಗೆ ಜಲಾಶಯಗಳಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡಿದ್ದರಿಂದಾಗಿ ಪ್ರವಾಹ ಭೀತಿ ಉಂಟಾಗಿದೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನದಿ ಪಾತ್ರದ ಗ್ರಾಮಸ್ಥರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದ್ದೇವೆ. ಜೊತೆಗೆ ಕೃಷ್ಣಾ ನದಿ ದಂಡೆ ಮೇಲಿರುವ 74 ಗ್ರಾಮಗಳಲ್ಲಿನ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದರು.
ಜಿಲ್ಲಾಡಳಿತ ಪ್ರವಾಹ ಪರಿಸ್ಥಿತಿ ಎದುರಿಸಲು ಸಕಲ ವ್ಯವಸ್ಥೆ ಮಾಡಿಕೊಂಡಿದ್ದು, ಎಸ್.ಡಿ.ಆರ್.ಎಫ್ ತಂಡ ಮತ್ತು ಎನ್.ಡಿ.ಆರ್.ಎಫ್ ತಂಡಗಳು ಕಾರ್ಯಾಚರಣೆಗೆ ಸಿದ್ಧವಾಗಿವೆ. ಸೇನಾಧಿಕಾರಿಯಾದ ಬ್ರಿಗೇಡಿಯರ್ ಕಾಲೋಳ್ಳಿ ಜೊತೆ ಮಾತುಕತೆಯಾಗಿದ್ದು, ಅಗತ್ಯವಿದ್ದರೆ ಸೈನ್ಯದ ನೆರವು ಪಡೆಯಲಾಗುವುದು ಎಂದರು.
ಜನರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಲು ಸಿಎಂ ಸೂಚನೆ: ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದ್ದು, ಪ್ರವಾಹ ಪರಿಸ್ಥಿತಿಯಲ್ಲಿ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ. ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಸಿಎಂ ತಿಳಿಸಿದ್ದಾರೆ ಎಂದು ಜಿಲ್ಲಾದಿಕಾರಿಗಳು ಮಾಹಿತಿ ನೀಡಿದರು.