ಅಥಣಿ: ಪ್ರವಾಹಕ್ಕೊಳಗಾದ ಅಥಣಿ ತಾಲೂಕಿನ ನದಿ ಇಂಗಳಗಾಂವ್ ಮತ್ತು ತೀರ್ಥ ಗ್ರಾಮಗಳ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ, ಪರಿಶೀಲಿಸಿದರು.
ಶಿಥಿಲಗೊಂಡ ಕೋಣೆಗಳಲ್ಲಿ ವಿದ್ಯಾರ್ಥಿಗಳನ್ನು ಕೂರಿಸದಂತೆ ಅಧಿಕಾರಿಗಳಿಗೆ ಸೂಚಿಸಿದರು. ನದಿ ಇಂಗಳಗಾಂವ್ ತೋಟದ ವಸತಿ ಶಾಲೆಯ 3 ಕೊಠಡಿ ನೆಲಸಮಗೊಳಿಸಿ, ಹೆಚ್ಚುವರಿ ಶೆಡ್ ನಿರ್ಮಿಸಬೇಕು ಎಂದರು. ಅಲ್ಲದೆ, ಶೀಘ್ರದಲ್ಲೇ ಹೊಸ ಕಟ್ಟಡ ನಿರ್ಮಿಸಿ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಸಚಿವರಿಗೆ ಮನವಿ
1995 ರ ನಂತರ ಪ್ರಾರಂಭವಾದ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ಅನುದಾನ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟ ರಾಜ್ಯ ಉಪಾಧ್ಯಕ್ಷ ಡಿ. ಬಿ. ನದಾಫ್ ಅವರು ಸಚಿವರಿಗೆ ಇದೇ ವೇಳೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ, ಜಿ.ಪಂ. ಸಿಇಒ ಡಾ. ಕೆ.ವಿ. ರಾಜೇಂದ್ರ, ಪ್ರಸನ್ನ ಕುಮಾರ, ಡಿಡಿಪಿಐ ಎ.ಬಿ. ಪುಂಡಲೀಕ ಸೇರಿದಂತೆ ಮತ್ತಿತರರಿದ್ದರು.