ಬೆಳಗಾವಿ: ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ನಾಳೆ ನಡೆಯಲಿದ್ದು, ಅಭ್ಯರ್ಥಿಗಳ ಹೆಸರನ್ನು ನಾಳೆ ಬೆಳಗ್ಗೆ ಘೋಷಿಸಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು.
ಬಿಜೆಪಿ ನಾಯಕರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಹಿರಿಯ ನಾಯಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ನಿರ್ದೇಶಕರ ಅಭಿಪ್ರಾಯಗಳಿಗೂ ಮನ್ನಣೆ ನೀಡಬೇಕಾಗಿದೆ. ಈ ಕಾರಣಕ್ಕೆ ನಾಳೆ ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು. ಹಾಲಿ ಅಧ್ಯಕ್ಷ ರಮೇಶ್ ಕತ್ತಿ ಇನ್ನೊಂದು ಅವಧಿಗೆ ಅಧ್ಯಕ್ಷನಾಗುತ್ತೇನೆ ಎಂದು ಅಪೇಕ್ಷೆಪಟ್ಟಿದ್ದಾರೆ. ಅಲ್ಲದೆ ಹಲವು ನಿರ್ದೇಶಕರು ಅಧ್ಯಕ್ಷರಾಗಲು ಒಲವು ತೋರಿದ್ದಾರೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನಿರ್ಣಯ ತೆಗೆದುಕೊಳ್ಳಲಾಗುವುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕಿದೆ. ಹೀಗಾಗಿ ನಾಳೆ ಬೆಳಗ್ಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಎಂದರು.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಡಿಸಿಸಿ ಬ್ಯಾಂಕ್ ಚುನಾವಣೆ ಸಂಬಂಧ ಮಾಧ್ಯಮಗಳಲ್ಲಿ ವಿಭಿನ್ನ ಸುದ್ದಿಗಳು ಬರುತ್ತಿವೆ. ಆದರೆ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಎಲ್ಲಾ ನಾಯಕರು ಸೇರಿಯೇ ನಿರ್ಣಯ ಮಾಡಿದ್ದೇವೆ. ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ಆಗಲಿದೆ ಎಂದರು.