ಬೆಳಗಾವಿ : ಲೋಕಸಭೆ ಉಪಚುನಾವಣೆಯಲ್ಲಿ ಜೆಡಿಎಸ್‍ನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾರ್ಯಕರ್ತರಿಂದ ಒತ್ತಾಯಗಳು ಕೇಳಿ ಬರುತ್ತಿವೆ. ವರಿಷ್ಠರೊಂದಿಗೆ ಚರ್ಚಿಸಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ಮುಖಂಡ, ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಜೆಡಿಎಸ್‍ನಿಂದ ಅಭ್ಯರ್ಥಿ ಕಣಕ್ಕಿಳಿಸಬೇಕೆಂಬ ಒತ್ತಾಯಗಳಿವೆ. ಹೀಗಾಗಿ, ಹೆಚ್ ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಅತೀ ಶೀಘ್ರದಲ್ಲೇ ಸೂಕ್ತ ನಿರ್ಧಾರ ಪ್ರಕಟಿಸಲಾಗುವುದು ಎಂದರು.
ಓದಿ : ಕಾಂಗ್ರೆಸ್‌ನವರು ಗೂಂಡಾಗಿರಿ ಬಿಟ್ಟು ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲಿ : ಸಂಸದ ಬಿ.ವೈ.ರಾಘವೇಂದ್ರ
ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳೆಂದು ಪರಿಗಣಿಸಿ ಅಭಿವೃದ್ಧಿಗೆ ಆದ್ಯತೆ ನೀಡಿ ಅನುದಾನ ಬಿಡುಗಡೆ ಮಾಡಬೇಕು. ನೀರಾವರಿ ಸೇರಿದಂತೆ ಎಲ್ಲಾ ವಿಷಯಗಳಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿಗೆ 1,500 ಕೋಟಿ ರೂ.ಗಳ ನೆರವು ನೀಡಲಾಗಿದೆ.
ಮಹದಾಯಿ ಯೋಜನೆಗೆ 1,677 ಕೋಟಿ ರೂ. ಮತ್ತು ಕೃಷ್ಣಾ ಯೋಜನೆಗೆ 5,00 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಹೇಳುತ್ತಿದ್ದರೂ, ಖರ್ಚಿನ ಪ್ರಮಾಣ ಕಡಿಮೆಯಾಗಿದೆ ಎಂದು ಕೋನರೆಡ್ಡಿ ಹೇಳಿದರು.
ಕೃಷ್ಣಾ, ಮಹದಾಯಿ ಸೇರಿದಂತೆ ಉತ್ತರ ಕರ್ನಾಟಕದ ಮಹತ್ವದ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳೆಂದು ಪರಿಗಣಿಸಿ ಅನುದಾನ ಬಿಡುಗಡೆಗೆ ಆಗ್ರಹಿಸಿ ಜೆಡಿಎಸ್ ಪಕ್ಷದಿಂದ ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.