ಬೆಳಗಾವಿ : ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ ತಕ್ಷಣ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಕಳೆದ ವರ್ಷ ಸುರಿದ ಭಾರಿ ಮಳೆಗೆ ಸಾಕಷ್ಟು ರೈತರ ಬೆಳೆ ಹಾಗೂ ಮನೆಗಳು ಸಂಪೂರ್ಣ ಹಾನಿಗೆ ಒಳಗಾಗಿದ್ದರೂ, ಸರ್ಕಾರ ಮಾತ್ರ ಅರ್ಹರಿಗೆ ಇದುವರೆಗೂ ಪರಿಹಾರ ವಿತರಿಸಿಲ್ಲ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಪರಿಹಾರ ನೀಡಬೇಕು. ತರಕಾರಿ ಮತ್ತು ಹಣ್ಣಿನ ಬೆಳೆಗಳನ್ನು ಬೆಳೆದು ಸಂಕಷ್ಟಕ್ಕೆ ಒಳಗಾಗಿರುವವರ ಬೆಳೆಗಳನ್ನು ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ಒದಗಿಸಬೇಕು. ಕಬ್ಬಿನ ಬಾಕಿ ಬಿಲ್, 2018-19 ರ ಪಸಲ್ ಭೀಮಾ ಹಣವನ್ನು ರೈತರ ಖಾತೆಗೆ ತಕ್ಷಣ ಜಮಾ ಮಾಡಬೇಕು ಎಂದು ಆಗ್ರಹಿಸಿದರು.
ರೈತರ ಎಲ್ಲಾ ಬೆಳೆಗಳಿಗೂ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು. ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದಾಗಬೇಕು. ರೈತರಿಗೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ವಿತರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.