ಬೆಳಗಾವಿ: ಸುವರ್ಣ ಸೌಧದೊಳಗೆ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿದ್ದರೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೌಧದ ಮುಖ್ಯದ್ವಾರದ ಎದುರು ರೈತರು ಪ್ರತಿಭಟನೆ ನಡೆಸುತ್ತಿದ್ದರು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ಸುವರ್ಣ ಸೌಧಕ್ಕೆ ಕಚೇರಿಗಳ ಸ್ಥಳಾಂತರ ಮಾಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಪ್ರವಾಹ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾನಿರತ ರೈತರು ಘೋಷಣೆ ಕೂಗಿದರು. ಪ್ರವಾಹದಿಂದ ರೈತರ ಬದುಕು ಬೀದಿಗೆ ಬಂದಿದೆ. ಆದರೂ ಬ್ಯಾಂಕ್ಗಳು ಸಾಲ ಮರುಪಾವತಿಗೆ ರೈತರಿಗೆ ನೋಟಿಸ್ ನೀಡುತ್ತಿವೆ. ಸರ್ಕಾರ ಈ ಬಗ್ಗೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು. ಸುಡು ಬಿಸಿಲಲ್ಲೇ ರೈತರು ಸೌಧದ ಮುಖ್ಯದ್ವಾರದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕೆಡಿಸಿ ಸಭೆ ಬಳಿಕ ಹೊರಬಂದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಪ್ರತಿಭಟನಾನಿರತ ರೈತರನ್ನು ಭೇಟಿ ಮಾಡಿದರು. ರೈತರ ಅಹವಾಲು ಸ್ವೀಕರಿಸಿ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸುವ ಜತೆಗೆ ಬೇಡಿಕೆ ಈಡೇರಿಸಲು ಸರ್ಕಾರ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದರು.