ಬೆಳಗಾವಿ: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ರೈತ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ (78) ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಬೆಳಗಾವಿ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರಾಗಿದ್ದ ಬಾಬಾಗೌಡ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ. ವಾರದ ಹಿಂದೆ ಬಾಬಾಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಾಬಾಗೌಡ ಅವರು 1989ರಲ್ಲಿ ಬೆಳಗಾವಿ ಗ್ರಾಮೀಣ, ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಗೆಲುವು ದಾಖಲಿಸಿ ವಿಧಾನಸಭೆ ಪ್ರವೇಶಿಸಿದ್ದರು.
1998ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಆಗಿ ಗೆಲುವು ಸಾಧಿಸಿದ್ದ ಅವರು, ಕೇಂದ್ರ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ದೇಶದಲ್ಲಿ ಗ್ರಾಮ ಸಡಕ್ ಯೋಜನೆ ಜಾರಿಗೊಳಿಸಿದ್ದ ಕೀರ್ತಿ ಬಾಬಾಗೌಡರದ್ದಾಗಿದೆ.
ಬಳಿಕ ರಾಜಕೀಯ ಏಳು, ಬೀಳು ಅನುಭವಿಸಿದ್ದ ಪಾಟೀಲ್ ಅವರು ರಾಜ್ಯದಲ್ಲಿ ರೈತ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಕೇಂದ್ರದ ನೂತನ ಕೃಷಿ ಕಾಯ್ದೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಅವರು, ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿದ್ದರು.
ಇದನ್ನೂ ಓದಿ: ಆಕ್ಸ್‌ಫರ್ಡ್ ವಿವಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷೆಯಾದ ಭಾರತೀಯ ಮೂಲದ ಅನ್ವೀ ಭೂತಾನಿ