ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ದೂಧಗಂಗಾ, ವೇದಗಂಗಾ, ಕೃಷ್ಣಾ ನದಿಯ ಒಳಹರಿವಿನಲ್ಲಿ ಹೆಚ್ಚಳವಾಗಿದೆ.
ಮಹಾ ಮಳೆಯಿಂದ ಕೃಷ್ಣೆಗೆ 62 ಸಾವಿರ ಕ್ಯೂಸೆಕ್‌ನಷ್ಟು ಒಳ ಹರಿವು ಹೆಚ್ಚಳವಾಗಿದ್ದು, ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಮುಳುಗಡೆಯಾಗಿವೆ ಎಂದು ಚಿಕ್ಕೋಡಿ ಉಪ-ವಿಭಾಗೀಯ ಅಧಿಕಾರಿ ರವೀಂದ್ರ ಕರಲಿಂಗಣ್ಣವರ ಮಾಹಿತಿ ನೀಡಿದ್ದಾರೆ.
ದೂಧಗಂಗಾ ನದಿಗೆ ನಿರ್ಮಿಸಿರುವ ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಸಿದ್ನಾಳ-ಅಕ್ಕೋಳ, ಮಲಿಕವಾಡ-ದತ್ತವಾಡ ಸೇತುವೆ, ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕುನ್ನೂರ-ಬಾರವಾಡ ಸೇತುವೆ ಮತ್ತು ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರು-ಕಲ್ಲೋಳ ಸೇತುವೆ ಹೀಗೆ ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಮುಳುಗಡೆಯಾಗಿವೆ.
ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯ ಜೊತೆಗೆ ನದಿ ತೀರದಲ್ಲೂ ಸಹಿತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ನದಿ ನೀರಿನ ಪ್ರಮಾಣ ಏರಿಕೆಯಾಗಿದೆ. ಇದರಿಂದ ನದಿ ತೀರದ ಜನರಲ್ಲಿ ಆತಂಕ ಹೆಚ್ಚಾಗಿದೆ.