ಬೆಂಗಳೂರು: ಸವದತ್ತಿ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ತಡೆ ನೀಡಿದ್ದರೂ, ಕಾಮಗಾರಿ ಮುಂದುವರೆಸಲು ಅವಕಾಶ ಮಾಡಿಕೊಟ್ಟಿರುವ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ವಿವರಣೆ ನೀಡುವಂತೆ ಹೈಕೋರ್ಟ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಬೆಳಗಾವಿ ಜಿಲ್ಲೆಯ ಇತಿಹಾಸ ಪ್ರಸಿದ್ದ ಯಲ್ಲಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಅಕ್ರಮ ಕಟ್ಟಡ ನಿರ್ಮಿಸುತ್ತಿರುವುದನ್ನು ಪ್ರಶ್ನಿಸಿ ಮಹೇಂದ್ರಗೌಡ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ, ಅರ್ಜಿದಾರರ ಪರ ವಕೀಲರು ವಾದಿಸಿ, ದೇವಸ್ಥಾನದ ಆಡಳಿತ ಮಂಡಳಿ ಆವರಣದಲ್ಲಿ ಕಟ್ಟಡ ನಿರ್ಮಾಣ ಮಾಡದಂತೆ ಹೈಕೋರ್ಟ್ ಅ.12ರಂದು ತಡೆಯಾಜ್ಞೆ ನೀಡಿದೆ. ಆದರೂ ಕಾಮಗಾರಿ ಮುಂದುವರಿಸಲಾಗಿದೆ ಎಂದು ತಿಳಿಸಿ, ಆ ಕುರಿತ ಫೋಟೋಗಳನ್ನು ಪೀಠದ ಮುಂದೆ ಹಾಜರು ಪಡಿಸಿದರು. ಕಾರ್ಯ ನಿರ್ವಹಣಾಧಿಕಾರಿ ಪರ ವಕೀಲರು ಪ್ರತಿಕ್ರಿಯಿಸಿ, ಕಾಮಗಾರಿ ನಡೆಸಿಲ್ಲ ಎಂದು ಸಮಜಾಯಿಸಿ ನೀಡಿದರು.
ವಾದ ಪ್ರತಿವಾದ ಆಲಿಸಿದ ಪೀಠ, ಅರ್ಜಿದಾರರು ಸಲ್ಲಿಸಿದ ಫೋಟೋಗಳನ್ನು ಪರಿಗಣಿಸಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತು. ಹೈಕೋರ್ಟ್ ತಡೆಯಾಜ್ಞೆ ಮೀರಿ, ಕಾಮಗಾರಿ ಮುಂದುವರಿಸಲು ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ, ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸಬಾರದೇಕೆ ಎಂಬುದಕ್ಕೆ ವಿವರಣೆ ನೀಡಿ ಎಂದು ದೇವಸ್ಥಾನದ ಕಾರ್ಯ ನಿರ್ಹಣಾಧಿಕಾರಿಗೆ ಸೂಚಿಸಿ ನೋಟಿಸ್ ಜಾರಿಗೊಳಿಸಿತು.
ಓದಿ: ಸವದತ್ತಿ ಯಲ್ಲಮ್ಮ ದೇವಾಲಯ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ: ಹೈಕೋರ್ಟ್ ತಡೆ
ಅಲ್ಲದೇ, ಕೋರ್ಟ್ ಆದೇಶದ ನಂತರ ದೇವಸ್ಥಾನ ಆವರಣದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆದಿದೆಯೋ ಅಥವಾ ನಿಲ್ಲಿಸಲಾಗಿದೆಯೋ ಎಂಬುದನ್ನು ಪರಿಶೀಲಿಸಲು ಜಿಲ್ಲಾಧಿಕಾರಿಗೆ ನಿರ್ದೇಶಿಸಿತು. ತಹಶೀಲ್ದಾರ್ ದರ್ಜೆಯ ಅಧಿಕಾರಿಯಿಂದ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಬೆಳಗಾವಿ ಜಿಲ್ಲಾಧಿಕಾರಿಗೆ ನಿರ್ದೇಶಿಸಿ, ವಿಚಾರಣೆಯನ್ನು 2021ರ ಜನವರಿ 18ಕ್ಕೆ ಮುಂದೂಡಿತು.
ವಿಜಯನಗರ ಸಾಮ್ರಾಜ್ಯ ಅಸ್ಥಿತ್ವದಲ್ಲಿದ್ದ ಕಾಲದಲ್ಲಿ (1486ರಲ್ಲಿ) ನಿರ್ಮಾಣವಾಗಿದೆ ಎನ್ನಲಾದ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಾಲಯವನ್ನು ಪುರಾತತ್ವ ಇಲಾಖೆ ಸಂರಕ್ಷಿತ ಸ್ಮಾರಕ ಎಂದು ಘೋಷಿಸಿದೆ. ನಿಯಮದಂತೆ ಈ ಪ್ರದೇಶದ 100 ಮೀಟರ್ ಸುತ್ತಳತೆಯಲ್ಲಿ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ. ಆದರೂ ನಿಯಮಾವಳಿ ಉಲ್ಲಂಘಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ದೇವಾಲಯದ ಆಡಳಿತ ಮಂಡಳಿ ಕೂಡ ಪ್ರಾಧಿಕಾರಗಳಿಂದ ಯಾವುದೇ ಅನುಮತಿ ಪಡೆಯದೇ ಕೆಲ ಕಟ್ಟಡಗಳ ನಿರ್ಮಾಣ ಆರಂಭಿಸಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾರೊಬ್ಬರೂ ಗಮನಹರಿಸುತ್ತಿಲ್ಲ ಎಂದು ಆರೋಪಿಸಿರುವ ಅರ್ಜಿದಾರರು, ಕಟ್ಟಡ ನಿರ್ಮಾಣ ಚಟುವಟಿಕೆ ತಡೆ ಹಿಡಿಯಬೇಕು ಎಂದು ಕೋರಿದ್ದಾರೆ.