ಬೆಳಗಾವಿ : ವೈಯಕ್ತಿಕವಾಗಿ ನನಗೆ ಅನ್ಯಾಯವಾಗಿದ್ದು ನಿಜ. ಬಿಜೆಪಿ ಹೈಕಮಾಂಡ್ ಡಾ.ರವಿ ಪಾಟೀಲ ಅವರಿಗೆ ಟಿಕೆಟ್ ನೀಡಿದೆ. ಎಲ್ಲರೂ ಒಗ್ಗಟ್ಟಾಗಿ ಅವರನ್ನೇ ಗೆಲ್ಲಿಸೋಣ ಎಂದು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ತಿಳಿಸಿದರು. ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಳೆದ 30 ವರ್ಷಗಳಿಂದ ಬಿಜೆಪಿ ಸಂಘಟನೆ ಮಾಡಿ ಪಕ್ಷವನ್ನು ಗೆಲ್ಲಿಸಲು ಪ್ರಯತ್ನಿಸುತ್ತಿದೆ. ಆದರೆ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿರಲಿಲ್ಲ. 2018ರಲ್ಲಿ ನನ್ನನ್ನು ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದ ಸಂದರ್ಭದಲ್ಲಿ ಜಾತಿ,ಬೇಧ ಮರೆತು ಉತ್ತರ ಕ್ಷೇತ್ರದವರು ಗೆಲ್ಲಿಸಿದರು. ನನಗೆ ಎರಡು ಬಾರಿ ಟಿಕೆಟ್ ತಪ್ಪಿದಾಗಲೂ ಪಕ್ಷ ಬಿಟ್ಟಿಲ್ಲ. ವೈಯಕ್ತಿಕವಾಗಿ ನನಗೆ ಅನ್ಯಾಯವಾಗಿದ್ದು ನಿಜ. ಆದರೆ ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಸದಾ ಬಿಜೆಪಿ ಜೊತೆಗಿದ್ದೇನೆ, ಹಿರಿಯ ನಾಯಕರು ನನ್ನೊಂದಿಗಿದ್ದು, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು.
ಯಾವ ಸಮುದಾಯಕ್ಕೂ ಅನ್ಯಾಯ ಮಾಡದೆ ಪ್ರಾಮಾಣಿಕವಾಗಿ ಐದು ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಹೈಕಮಾಂಡ್ ಈ ಕ್ಷೇತ್ರದಲ್ಲಿ ಬದಲಾವಣೆ ಬಯಸಿ ಡಾ.ರವಿ ಪಾಟೀಲ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಹೀಗಾಗಿ ನನ್ನ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಅನಿಲ್ ಬೆನಕೆ ಅಭ್ಯರ್ಥಿ ಎಂದುಕೊಂಡೇ ಡಾ. ರವಿ ಪಾಟೀಲ ಗೆಲುವಿಗೆ ಶ್ರಮಿಸಬೇಕು. ಕಳೆದ ನಾಲ್ಕು ದಿನಗಳಿಂದ ಅನಿಲ್ ಬೆನಕೆ ಅವರು ಬೇರೆ ಬೇರೆ ಪಕ್ಷಗಳಿಂದ ಸ್ಪರ್ಧೆ ನಡೆಸುತ್ತಾರೆ ಎನ್ನುವ ಸುದ್ದಿಗಳಿದ್ದವು. ಆದರೆ ಅವೆಲ್ಲವೂ ಶುದ್ಧ ಸುಳ್ಳ ಎಂದು ಅನಿಲ್ ಬೆನಕೆ ಸ್ಪಷ್ಟಪಡಿಸಿದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನಿಮಗೆ ಲೋಕಸಭೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅನಿಲ್ ಬೆನಕೆ, ಹಿರಿಯರನ್ನು ಭೇಟಿಯಾಗಿದ್ದೇನೆ, ಕಾರ್ಯಕರ್ತರಾಗಿ ಪಕ್ಷಕ್ಕಾಗಿ ದುಡಿಯಿರಿ ಎಂದಿದ್ದಾರೆ. ನಾನು ಬಿಜೆಪಿ ಅಭ್ಯರ್ಥಿ ಗೆಲುವಿಗಾಗಿ ಕೆಲಸ ಮಾಡುತ್ತೇನೆ ಎಂದಷ್ಟೇ ಹೇಳಿದರು.
ಶಾಸಕ ಅಭಯ ಪಾಟೀಲ ಮಾತನಾಡಿ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆದು ಗೆಲುವು ಸಾಧಿಸುವ ಅಭ್ಯರ್ಥಿಗಳಿಗೆ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ವರಿಷ್ಠರು ಟಿಕೆಟ್ ನೀಡಿದ್ದಾರೆ. ನಾವೆಲ್ಲ ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಈ ಬಾರಿ ಚುನಾವಣೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗುತ್ತಿದ್ದೇವೆ. ಬಡವರು, ಕಾರ್ಮಿಕರು, ನೇಕಾರರು, ರೈತರು, ವಿದ್ಯಾರ್ಥಿಗಳು, ಯುವ ಸಮುದಾಯ ಸೇರಿದಂತೆ ಎಲ್ಲ ವರ್ಗದ ಜನರು ಬಿಜೆಪಿ ಬೆಂಬಲಿಸುತ್ತಿದ್ದಾರೆ.
ಹಾಗಾಗಿ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ನಾವೆಲ್ಲ ಮುಖಂಡರು, ಕಾರ್ಯಕರ್ತರು ಪಕ್ಷ ಗೆಲುವಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರ ಸಚಿವ ಗಿರೀಶ್ ಮಹಾಜನ್, ಸಂಸದೆ ಮಂಗಲ ಅಂಗಡಿ, ಅಭ್ಯರ್ಥಿ ಡಾ.ರವಿ ಪಾಟೀಲ್, ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಝೀರಲಿ ಸೇರಿ ಮತ್ತಿತರರು ಇದ್ದರು.
ಇದನ್ನೂ ಓದಿ : ವರುಣ ಕ್ಷೇತ್ರದಿಂದ ವಿ.ಸೋಮಣ್ಣ ನಾಮಪತ್ರ ಸಲ್ಲಿಕೆ: ಸಿಎಂ ಬೊಮ್ಮಾಯಿ, ಸಂಸದ ಪ್ರತಾಪ್ ಸಿಂಹ ಉಪಸ್ಥಿತಿ