ಚಿಕ್ಕೋಡಿ : ಚಿಕ್ಕೋಡಿಯನ್ನು ಜಿಲ್ಲೆ ಮಾಡಲು ಉಗ್ರ ಹೋರಾಟ ಮಾಡುವ ಜತೆಗೆ ಅದಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧರಿರುವುದಾಗಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ ಆರ್ ಸಂಗಪ್ಪಗೋಳ ಆಕ್ರೋಶ ವ್ಯಕ್ತ ಪಡಿಸಿದರು.
ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ಚಿಕ್ಕೋಡಿ ಜಿಲ್ಲೆಗಾಗಿ ಹೋರಾಟ ಮಾಡುತ್ತ ಬಂದಿದ್ದೇವೆ. ಈವರೆಗೂ ಸರ್ಕಾರಗಳ ಕಡೆಯಿಂದ ಯಾವುದೇ ರೀತಿಯ ಸ್ಪಂದನೆ ದೊರಕಿಲ್ಲ ಎಂದರು.
ಚಿಕ್ಕೋಡಿ ಜಿಲ್ಲೆಯನ್ನಾಗಿ ಮಾಡಲು ಸರ್ಕಾರ ವಿಳಂಬ ಧೋರಣೆ ನಡೆಸುತ್ತಿದೆ. ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಕೂಡಲೇ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಮಾಡಬೇಕು. ಅಥಣಿ, ರಾಯಬಾಗ, ಕಾಗವಾಡ, ಸೇರಿದಂತೆ ಹಲವು ತಾಲೂಕಿನ ಜನರಿಗೆ ಬೆಳಗಾವಿಗೆ ಹೋಗಿ ಬರಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಗೆ ಬರುವ ಎಲ್ಲ ತಾಲೂಕುಗಳನ್ನು ಒಟ್ಟುಗೂಡಿಸಿ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.