ಬೆಳಗಾವಿ: ಮಲಪ್ರಭಾ ಯೋಜನಾ ವಲಯದಲ್ಲಿ ಚಾಲ್ತಿಯಲ್ಲಿರುವ ವಿವಿಧ ಕಾಮಗಾರಿಗಳು ಮತ್ತು ವಸತಿ ಗೃಹಗಳ ನವೀಕರಣಕ್ಕೆ ಸಾವಿರಾರು ಕೋಟಿ ರೂಪಾಯಿ ಅಗತ್ಯವಿದೆ. ಆದ್ದರಿಂದ ಈ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದ ಬಳಿಯ ಮಲಪ್ರಭಾ ಯೋಜನಾ ವಲಯದ ಅಧೀಕ್ಷಕ ಎಂಜಿನಿಯರ್ ಕಚೇರಿಯಲ್ಲಿ ಮಲಪ್ರಭಾ ಯೋಜನಾ ವಲಯದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ, ಜಿಲ್ಲೆಯ ಶಾಸಕರು ಶಿಫಾರಸು ಮಾಡಿರುವ ಎಲ್ಲ ನೀರಾವರಿ ಯೋಜನೆ, ದುರಸ್ತಿ ಕೆಲಸ ಮತ್ತು ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಮಲಪ್ರಭಾ ಆಧುನೀಕರಣ ಯೋಜನೆ, ಕೆರೆಗೆ ನೀರು ತುಂಬುವ ಕಾಮಗಾರಿ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಬೇಕಾದ ಪರಿಹಾರದ ಮೊತ್ತವನ್ನು ಪಾವತಿಸಲು ಅನುಕೂಲವಾಗುವಂತೆ ಪ್ರತಿ ವರ್ಷದ ಅನುದಾನದಲ್ಲಿ ನಿರ್ದಿಷ್ಟ ಮೊತ್ತವನ್ನು ಮೀಸಲಿಡಲಾಗುವುದು ಎಂದು ತಿಳಿಸಿದರು.
ಕಾಮಗಾರಿ ವಿಳಂಬಗೊಳಿಸುವ ಗುತ್ತಿಗೆದಾರರ ವಿರುದ್ಧ ಕ್ರಮ :
ಕಾಮಗಾರಿ ವಿಳಂಬಗೊಳಿಸುವ ಗುತ್ತಿಗೆದಾರರಿಗೆ ನೋಟಿಸ್ ನೀಡುವಂತೆ ಸಚಿವ ಜಾರಕಿಹೊಳಿ ಸೂಚನೆ ನೀಡಿದರು. ನೋಟಿಸ್ ನೀಡಿದ ಬಳಿಕವೂ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಭೂ ಸ್ವಾಧೀನ ಪ್ರಕರಣಗಳು ಹೊರತುಪಡಿಸಿ, ಕಾಮಗಾರಿ ವಿಳಂಬಗೊಳಿಸುವ ಗುತ್ತಿಗೆದಾರರ ಧೋರಣೆಯನ್ನು ಸಹಿಸುವುದಿಲ್ಲ. ಗುತ್ತಿಗೆದಾರರ ಮೇಲೆ ಕ್ರಮಕೈಗೊಳ್ಳುವುದರ ಜತೆಗೆ ತಾಂತ್ರಿಕ ಕಾರಣಗಳಿಂದ ಯಾವುದೇ ಯೋಜನೆ ಕುಂಠಿತಗೊಳ್ಳದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಇದೇ ವೇಳೆ, ರಾಜಸ್ಥಾನ ಮತ್ತು ಮಹಾರಾಷ್ಟ್ರದ ಮಾದರಿಯಲ್ಲಿ ರೈತರ ಸಹಭಾಗಿತ್ವದಲ್ಲಿ ನೀರಾವರಿ ವ್ಯವಸ್ಥೆ ಅನುಷ್ಠಾನದ ಬಗ್ಗೆ ಅಧ್ಯಯನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದಿಂದ ಸುಮಾರು 14 ಟಿಎಂಸಿ ನೀರು ಲಭಿಸಲಿದೆ. ಸೂಕ್ತ ಯೋಜನೆ ರೂಪಿಸುವ ಮೂಲಕ ಜನರಿಗೆ ಅನುಕೂಲ ಆಗುವಂತೆ ಮಾಡಬೇಕು ಎಂದು ಶಾಸಕ ಶಂಕರಗೌಡ ಪಾಟೀಲ ಮುನೇನಕೊಪ್ಪ ಮನವಿ ಮಾಡಿಕೊಂಡರು.
ಮಲಪ್ರಭಾ ಯೋಜನೆಯ ಮುಖ್ಯ ಎಂಜಿನಿಯರ್ ವಿ.ಕೆ.ಪೊದ್ದಾರ ಮಾತನಾಡಿ, ಮಲಪ್ರಭಾ 1.96 ಲಕ್ಷ ಹೆಕ್ಟೇರ್ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಜಲಾಶಯದ ಉಪಯೋಗಿಸಲ್ಪಡುವ ನೀರಿನ ಸಂಗ್ರಹಣಾ ಸಾಮರ್ಥ್ಯ 33.34 ಟಿಎಂಸಿ ಇರುತ್ತದೆ. ಜಲಾಶಯ ನಿರ್ಮಾಣ ಆದ 1972-73 ರಿಂದ ಇಲ್ಲಿಯವರೆಗೆ ಐದು ಬಾರಿ ಮಾತ್ರ ಭರ್ತಿಯಾಗಿದೆ ಎಂದರು.