ಬೆಳಗಾವಿ: ಜನವರಿ 25,26 ರಂದು ಬೆಳಗಾವಿಯ ಶಿವಬಸವ ನಗರದ ಎಸ್.ಜಿ.ಬಾಳೇಕುಂದ್ರಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ವಿ.ರಾಜೇಂದ್ರ ಘೋಷಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಸರಿಯಾದ ಸಮಯಕ್ಕೆ ಹಾಗೂ ಸರಿಯಾದ ಪ್ರಮಾಣದಲ್ಲಿ ಮಳೆ ಬಾರದೇ ಇರುವುದು ರೈತರ ಸಂಕಷ್ಟಕ್ಕೆ ಕಾರಣವಾಗಿದೆ. ಇನ್ನೊಂದು ಕಡೆಗೆ ಜನರು ಅಸಹಜ ಜೀವನಶೈಲಿ ಅಳವಡಿಸಿಕೊಂಡಿದ್ದು, ಅಸಮತೋಲನ ಪೌಷ್ಟಿಕಾಂಶ ಮತ್ತು ಅಲ್ಪನಾರಿನ ಆಹಾರ ಪದಾರ್ಥಗಳನ್ನು ಸೇವಿಸುತ್ತಿರುವುದರಿಂದ ಹಲವಾರು ಮಾರಕ ರೋಗಗಳಿಂದ ಬಳಲುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಪಾರಂಪರಿಕ ಬೆಳೆಗಳಾದ ಸಿರಿಧಾನ್ಯಗಳನ್ನ ಕಡಿಮೆ ಫಲವತ್ತತೆ ಹಾಗೂ ಕಡಿಮೆ ಮಳೆಯಲ್ಲಿಯೂ ಬೆಳೆಯಬಹುದಾಗಿದೆ. ಸಿರಿಧಾನ್ಯಗಳು ಪೌಷ್ಟಿಕಾಂಶಗಳ ಆಗರಗಳಾಗಿವೆ. ಇವುಗಳಲ್ಲಿ ಯಥೇಚ್ಛವಾದ ನಾರಿನ ಅಂಶ ಹಾಗೂ ವಿವಿಧ ಪೋಷಕಾಂಶ ಮತ್ತು ಖನಿಜಾಂಶಗಳು ಇರುತ್ತವೆ. ಇದನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ರೈತರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಲು ಸಾವಯವ ಮತ್ತು ಸಿರಿಧಾನ್ಯ ಮೇಳ ಹಮ್ಮಿಕೊಳ್ಳಲಾಗಿದೆ ಎಂದರು.
ಸಾವಯವ ಮತ್ತು ಸಿರಿಧಾನ್ಯ ಮೇಳ ಮತ್ತು ಫಲಪುಷ್ಪ ಪ್ರದರ್ಶನವನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಮತ್ತು ಕೃಷಿ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಲಿದ್ದು, ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಸಚಿವೆ ಶಶಿಕಲಾ ಜೊಲ್ಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.