ಬೆಳಗಾವಿ: ''ಬೆಳಗಾವಿಯಲ್ಲಿ ಆಗಸ್ಟ್ 29 ಅಥವಾ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತೇವೆ'' ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಸ್ಥಳ ಪರಿಶೀಲನೆ ನಡೆಸಿ, ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ''ಕಾರ್ಯಕ್ರಮಕ್ಕಾಗಿ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರೂ ಆಗಮಿಸುತ್ತಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆಯಿದೆ'' ಎಂದರು.
''ಒಂದು ವಿಭಾಗದಲ್ಲಿ ಒಂದು ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಶಕ್ತಿ ಯೋಜನೆ, ಕಲಬುರ್ಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಈಗ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು. ಅನ್ನಭಾಗ್ಯ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲು ನಿರ್ಧರಿಸಲಾಗಿದೆ. ಯುವನಿಧಿ ಯೋಜನೆಗೆ ಡಿಸೆಂಬರ್ ಇಲ್ಲವೇ ಜನವರಿಯಲ್ಲಿ ಪ್ರಾರಂಭಿಸಲಾಗುವುದು'' ಎಂದು ಹೇಳಿದರು.
ಗೃಹಲಕ್ಷ್ಮಿ ಯೋಜನೆಯಲ್ಲಿ 1 ಕೋಟಿ 33 ಲಕ್ಷ ಕುಟುಂಬಗಳ ಪೈಕಿ ಈಗಾಗಲೇ 1 ಕೋಟಿ 6 ಲಕ್ಷ ನೋಂದಣಿಯಾಗಿದೆ. ಬಡವರು, ಮಹಿಳೆಯರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ'' ಎಂದು ಸಿಎಂ ತಿಳಿಸಿದರು.
ಬಿಬಿಎಂಪಿ ಕಚೇರಿಯ ಕೊಠಡಿಗೆ ಬೆಂಕಿ- ಸಿಎಂ ಪ್ರತಿಕ್ರಿಯೆ: ''ಬೆಂಗಳೂರಿನಲ್ಲಿ ಬಿಬಿಎಂಪಿ ಕಚೇರಿಯ ದಾಖಲೆಯ ಕೊಠಡಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಬಿದ್ದಿದೆ ಎಂದು ಹೇಳುತ್ತಿದ್ದಾರೆ. ಘಟನೆಯಲ್ಲಿ ಕೆಲವರಿಗೆ ಗಾಯವಾಗಿದೆ. ಬೆಂಗಳೂರಿಗೆ ಹೋಗಿ ಈ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಸ್ಥಳಕ್ಕೆ ತೆರಳಿ ನಾವು ನೋಡಿದ ಮೇಲೆ ಎಲ್ಲವೂ ಗೊತ್ತಾಗುತ್ತದೆ ಎಂದು ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಆಸೀಫ್ ಸೇಠ್ ಸೇರಿ ಮತ್ತಿತರರು ಜತೆಗಿದ್ದರು.
9 ಜನರಿಗೆ ಗಾಯ: ಬಿಬಿಎಂಪಿ ಮುಖ್ಯ ಕಚೇರಿ ಆವರಣದಲ್ಲಿರುವ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕೊಠಡಿಯಲ್ಲಿ ಇಂದು (ಶುಕ್ರವಾರ) ಬೆಂಕಿ ಅನಾಹುತ ನಡೆಯಿತು. ಅಗ್ನಿ ಅವಘಡದಲ್ಲಿ 9 ಜನ ಪಾಲಿಕೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಬಿಬಿಎಂಪಿ ಆಯುಕ್ತರು ಭೇಟಿ ನೀಡಿ ಪರಿಶೀಲಿಸಿದರು.
"ಬಿಬಿಎಂಪಿ ಮುಖ್ಯ ಕಚೇರಿಯ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಓವನ್ ಬಾಕ್ಸ್ ಲೀಕ್ ಆಗಿ ಈ ಘಟನೆ ನಡೆದಿದೆ. 7 ಜನರಿಗೆ ಗಾಯವಾಗಿದೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಪರಿಶೀಲಿಸುತ್ತಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣವೇನು ಎನ್ನುವುದು ತನಿಖೆಯ ನಂತರ ಗೊತ್ತಾಗಲಿದೆ" ಎಂದು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: Basavaraja Bommai: 'ವಿಷಯಾಂತರ ಬಿಟ್ಟು ಗುತ್ತಿಗೆದಾರರ ಸಂಶಯ ನಿವಾರಿಸಿ'- ಡಿಕೆಶಿಗೆ ಬೊಮ್ಮಾಯಿ ತಿರುಗೇಟು