ಬೆಳಗಾವಿ: ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ಗಳನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಇಲಾಖೆಯ ಸಚಿವರಾದ ಲಕ್ಷ್ಮಣ ಸವದಿ ಅವರು ಗುರುವಾರ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.
ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದ ಬಳಿಯಲ್ಲಿ ಬಸ್ಗಳನ್ನು ಅವರು ಹಸ್ತಾಂತರಿಸಿದರು. ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಈ ಕ್ಲಿನಿಕ್ಗಳನ್ನು ಬಳಸಲಾಗುವುದು. ಕಂಟೇನ್ಮೆಂಟ್ ಜೋನ್ಗಳಾದ ರಾಯಭಾಗ ತಾಲೂಕಿನ ಕುಡಚಿ ಪಟ್ಟಣ, ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಹಾಗೂ ಬೆಳಗಾವಿ ನಗರದಲ್ಲಿ ಆರೋಗ್ಯ ಸೇವೆ ದೊರೆಯಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿವರಿಸಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕ ಸತೀಶ್ ಜಾರಕಿಹೊಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.