ಚಿಕ್ಕೋಡಿ (ಬೆಳಗಾವಿ): ಜಿಲ್ಲೆಯ ಪೀರಣವಾಡಿ ಗ್ರಾಮದಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕನ್ನಡಪರ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ರಾಯಣ್ಣನ ಪ್ರತಿಮೆ ಪುನರ್ ಪ್ರತಿಷ್ಠಾಪಿಸುವಂತೆ ಆಗ್ರಹಿಸಿದ್ದಾರೆ. ಕನ್ನಡಪರ ಸಂಘಟನೆಗಳು ಬೀರದೇವರ ದೇವಸ್ಥಾನದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಪಾದಯಾತ್ರೆ ನಡೆಸಿ ಉಪತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಸ್ವಾತಂತ್ರ್ಯ ದಿನಾಚರಣೆಯೆಂದು ಪೀರಣವಾಡಿಯಲ್ಲಿ ರಾಯಣ್ಣ ಪ್ರತಿಮೆಯನ್ನು ಜಿಲ್ಲಾಡಳಿತ ತೆರವುಗೊಳಿಸಿರುವುದು ಕನ್ನಡಿಗರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರನಿಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಅಪಮಾನ ಮಾಡಿದಂತಾಗಿದೆ. ಕೂಡಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರುಸ್ಥಾಪಿಸಬೇಕು, ಇಲ್ಲವಾದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.