ಬೆಳಗಾವಿ: ಬೈಲಹೊಂಗಲ ತಾಲೂಕಿನ ಮರಕಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅನಧಿಕೃತ ಕಲ್ಲು ಗಣಿಗಾರಿಕೆ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬೈಲಹೊಂಗಲ ತಾಲೂಕಿನ ಮರಕಟ್ಟಿ ಗ್ರಾಪಂ ವ್ಯಾಪ್ತಿಯ ನಾಲ್ಕೈದು ಗ್ರಾಮಗಳಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಗ್ರಾಮದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಗಣಿಗಾರಿಕೆ ವೇಳೆ ಸ್ಫೋಟಕ ಬಳಸಲಾಗುತ್ತಿದ್ದು, ಇದರಿಂದ ಅನೇಕ ಮನೆಗಳು ಬಿರುಕು ಬಿಟ್ಟಿವೆ. ಇಷ್ಟೆಲ್ಲ ಆದರೂ ಅಧಿಕಾರಿಗಳು ಕೈಕಟ್ಟಿ ಕುಳಿತ್ತಿದ್ದಾರೆ ಎಂದು ಕರವೇ ಕಾರ್ಯಕರ್ತರು ಆರೋಪಿಸಿದ್ದಾರೆ.
ಮರಕಟ್ಟಿ ಗ್ರಾಪಂ ಅಧ್ಯಕ್ಷ ರುದ್ರಗೌಡ ಪಾಟೀಲ್ ಮಾತನಾಡಿ, ಕಲ್ಲು ಗಣಿಗಾರಿಕೆಯಿಂದ ಹೊರಡುವ ಧೂಳಿನಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಸುತ್ತಮುತ್ತಲಿನ ನೀರು ಮಲಿನಗೊಂಡಿದ್ದು, ಗ್ರಾಮದ ಜನರು ಅನಾರೋಗ್ಯದಿಂದ ಬಳಲುವಂತಾಗಿದೆ. ಕೂಡಲೇ ಜಿಲ್ಲಾಡಳಿತ ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದಾರೆ.