ಅಥಣಿ: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಥಣಿ ತಾಲೂಕಿನ ಕಟಿಗೇರಿ ಗ್ರಾಮದ ಪಶು ಚಿಕಿತ್ಸಾ ಕೇಂದ್ರಕ್ಕೆ ನೀರು ನುಗ್ಗಿದ್ದು, ಈ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದ್ದರಿಂದ ನೀರಿನಲ್ಲಿ ಹುಳುಗಳಾಗಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಗ್ರಾಮಸ್ಥರನ್ನು ಕಾಡುತ್ತಿದೆ.
ಪಶು ಚಿಕಿತ್ಸಾ ಕೇಂದ್ರದ ಪಕ್ಕದಲ್ಲಿ ಸುಮಾರು ವರ್ಷಗಳಿಂದಲೂ ಕಲ್ಲಿನ ಕ್ವಾರೆಯಿದೆ. ಸದ್ಯ, ಸುರಿಯುತ್ತಿರುವ ಮಳೆಯಿಂದಾಗಿ ಕಲ್ಲಿನ ಕ್ವಾರೆ ತುಂಬಿ ಪಕ್ಕದಲ್ಲಿರುವ ಪಶು ಚಿಕಿತ್ಸಾ ಕೇಂದ್ರದ ಆವರಣದಲ್ಲಿ ನೀರು ನಿಂತಿತ್ತು. ಆ ನೀರು ಗ್ರಾಮದಲ್ಲಿ ಹರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಗ್ರಾಮ ಪಂಚಾಯತ್ ಅಧಿಕಾರಿಗಳ ಬೇಜವಾಬ್ದಾರಿತನದಿಂದ ನಾವು ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದು ಪಂಚಾಯತ್ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದ ಪರಿಣಾಮ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಆಸ್ಪತ್ರೆಯ ಆವರಣದಲ್ಲಿ ಮುರುಮ್(ಕಲ್ಲಿನ ಪುಡಿ) ಹಾಕುವಂತೆ ಹಲವು ಬಾರಿ ಮನವಿ ಮಾಡಿಕೊಂಡರು ಪ್ರಯೋಜನವಾಗಿಲ್ಲ. ಅಲ್ಪಸ್ವಲ್ಪ ಮಳೆ ಬಂದರೂ ಆವರಣದಲ್ಲಿ ನೀರು ನಿಲ್ಲುತ್ತದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹೆಚ್ಚಾಗಿದ್ದು, ಕೂಡಲೇ ಗ್ರಾಮ ಪಂಚಾಯತ್ ಅಧಿಕಾರಿಗಳು ಗಮನ ಹರಿಸಲಿ ಎಂಬುದು ಗ್ರಾಮಸ್ಥರ ಒತ್ತಾಯಿಸಿದ್ದಾರೆ.