ಬೆಳಗಾವಿ: ರಾಜ್ಯದಲ್ಲಿ ಭೀಕರ ಮಳೆಯಿಂದ ಲಕ್ಷಾಂತರ ಹೆಕ್ಟೇರ್ ಕೃಷಿ ಬೆಳೆ ನಾಶವಾಗಿದ್ದು, ಸರ್ಕಾರ ಕೂಡಲೇ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ರೈತ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಇಂದು ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ರೈತ ಸಂಘದ ಸದಸ್ಯರು, ರಾಜ್ಯದಲ್ಲಿ ಭಾರಿ ಮಳೆಯಿಂದ ರೈತನ ಬದುಕು ಬೀದಿಗೆ ಬಿದ್ದಿದೆ. ಕಷ್ಟ ಪಟ್ಟು ಬೆಳೆದ ಬೆಳೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು, ಸರ್ಕಾರ ಇಲ್ಲಿಯವರೆಗೆ ಪರಿಹಾರ ನೀಡಿಲ್ಲ. ಕಬ್ಬು ಬೆಳೆಗಾರರು ಅತ್ಯಂತ ಗಂಭೀರ ಸಮಸ್ಯೆ ಅನುಭವಿಸುತ್ತಿದ್ದು, ಒಂದು ಎಕರೆ ಹಾನಿಯಾದ ಕಬ್ಬಿಗೆ ಒಂದು ಲಕ್ಷ ರೂ.ವರೆಗೂ ಪರಿಹಾರ ನಿಗದಿ ಮಾಡಬೇಕೆಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ರೂಪಿಸಿರುವ ಎನ್ಡಿಆರ್ಎಫ್ ನಿಯಮಗಳಲ್ಲಿ ಬದಲಾವಣೆ ಮಾಡಬೇಕು. ಈಗಿರುವ ನಿಯಮಗಳಿಂದ ರೈತರಿಗೆ ಮೋಸವಾಗುತ್ತಿದ್ದು, ಸಮರ್ಪಕ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬದಲಾವಣೆ ಮಾಡಬೇಕು ಎಂದರು. ಆದಷ್ಟು ಬೇಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ರೈತರಿಗೆ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು.