ರಾಮದುರ್ಗ (ಬೆಳಗಾವಿ): ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ತಯಾರಿಸುವುದರ ಜೊತೆಗೆ ಶಿಕ್ಷಣದ ಪ್ರಗತಿಯ ಕುರಿತು ನಿಲಯ ಮೇಲ್ವಿಚಾರಕರು ಕಾಳಜಿ ವಹಿಸಬೇಕು ಎಂದು ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ಪಟ್ಟಣದ ಆಂಜನೇಯ ನಗರದಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಬಡ ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಸತಿ ನಿಲಯ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡಿ ಸರ್ಕಾರ ಪ್ರೋತ್ಸಾಹಿಸುತ್ತಿದೆ ಎಂದರು.
ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸದಸ್ಯ ರೇಣಪ ಸೋಮಗೊಂಡ ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ಎಲ್ಲರೂ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು. ಜಿಪಂ ಸದಸ್ಯ ಮಾರುತಿ ತುಪ್ಪದ ಮಾತನಾಡಿದರು.