ಬೆಳಗಾವಿ: ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ 10 ದಿನದೊಳಗೆ ಪ್ರಕಟ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ವಿಧಾನಸಭೆಯಲ್ಲಿ ಭರವಸೆ ನೀಡಿದರು.
ವಿಧಾನಸಭೆಯಲ್ಲಿ ಪ್ರಶೋತ್ತರ ಅವಧಿ ವೇಳೆ ವಿರೋಧ ಪಕ್ಷದ ಉಪ ನಾಯಕ ಯು.ಟಿ ಖಾದರ್ ಈ ವಿಚಾರವನ್ನು ಪ್ರಸ್ತಾಪ ಮಾಡಿ, ಫಲಿತಾಂಶ ವಿಳಂಬದಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ. ಮಂಗಳೂರು ವಿವಿಯಲ್ಲಿ ಮೊದಲ ಸೆಮಿಸ್ಟರ್ ಫಲಿತಾಂಶ ಇನ್ನೂ ಪ್ರಕಟಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ. ಫಲಿತಾಂಶ ಪ್ರಕಟಕ್ಕೆ ತಡ ಮಾಡಿದರೆ ವಿಶ್ವವಿದ್ಯಾನಿಲಯ ಹೇಗೆ ನಡೆಯಲು ಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೇರೆ ವಿಶ್ವವಿದ್ಯಾಲಯದಲ್ಲಿ ಫಲಿತಾಂಶ ಪ್ರಕಟವಾಗಿದೆ, ಮಂಗಳೂರು ವಿವಿಯಲ್ಲಿ ಮಾತ್ರ ತಡೆ ಏಕೆ?. ಫಲಿತಾಂಶ ವಿಳಂಬಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ, ಇನ್ನು 10 ದಿನದೊಳಗೆ ಮಂಗಳೂರು ವಿವಿ ಫಲಿತಾಂಶ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ: ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ