ಬೆಳಗಾವಿ: ಮರಾಠ ಅಭಿವೃದ್ಧಿ ಪ್ರಾಧಿಕಾರ ಆರಂಭಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಹರ್ಷ ವ್ಯಕ್ತಪಡಿಸಿ, ಮರಾಠ ಸಮಾಜದ ಮುಖಂಡರೊಂದಿಗೆ ಶಾಸಕ ಅನಿಲ್ ಬೆನಕೆ ನೇತೃತ್ವದಲ್ಲಿ ಸಂಭಾಜಿ ವೃತ್ತದಲ್ಲಿ ವಿಜಯೋತ್ಸವ ಆಚರಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಕರ್ನಾಟಕ ರಾಜ್ಯ ಸರ್ಕಾರ ಕೈಗೊಂಡ ನಿರ್ಧಾರಕ್ಕೆ ಬೆಳಗಾವಿ ಜಿಲ್ಲೆಯ ಮರಾಠ ಸಮಾಜ ಹರ್ಷ ವ್ಯಕ್ತಪಡಿಸಿದೆ. ಮರಾಠ ಸಮಾಜದ ಅಭಿವೃದ್ಧಿ, ಹಿತದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೈಗೊಂಡ ದಿಟ್ಟ ನಿರ್ಧಾರ ಇದಾಗಿದೆ ಎಂದು ಹರ್ಷ ವ್ಯಕ್ತಪಡಿಸಿ ಮುಖಂಡರು ವಿಜಯೋತ್ಸವ ಆಚರಿಸಿದರು.
ಈ ವೇಳೆ ಶಾಸಕ ಅನಿಲ್ ಬೆನಕೆ ಮಾತನಾಡಿ, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಕರ್ನಾಟಕ ಸರ್ಕಾರದ ನಿರ್ಧಾರ ಸ್ವಾಗತಾರ್ಹವಾಗಿದೆ. ಈ ಸಂಬಂಧ ಹಲವಾರು ದಿನಗಳಿಂದ ಇದ್ದ ಬೇಡಿಕೆಯನ್ನು ಮುಖ್ಯಮಂತ್ರಿ ಈಡೇರಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಮರಾಠ ಸಮಾಜಕ್ಕೆ ದೀಪಾವಳಿ ಉಡುಗೊರೆ ನೀಡಿದ್ದಾರೆ. ಮರಾಠ ಸಮಾಜದ ಅಭಿವೃದ್ಧಿ, ಹಿತದೃಷ್ಟಿಯಿಂದ ಸರ್ಕಾರದ ನಿರ್ಧಾರ ಹರ್ಷ ತಂದಿದೆ ಎಂದರು.
ಬಿಜೆಪಿ ಹಾಗೂ ಮರಾಠ ಸಮಾಜದ ಮುಖಂಡ ಕಿರಣ ಜಾಧವ್ ಮಾತನಾಡಿ, ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಸರ್ಕಾರದ ನಿರ್ಧಾರದಿಂದ ಸಮಾಜದ ಜನತೆಗೆ ಸಂತಸವಾಗಿದೆ. ಆದರೆ ಪ್ರಾಧಿಕಾರದ ಕಚೇರಿಯನ್ನು ಬೆಳಗಾವಿಯಲ್ಲಿಯೇ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.