ಬೆಳಗಾವಿ: ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಕ್ಷೇತ್ರಮಟ್ಟದ ರೈತ ಮಿತ್ರ ಸಿಬ್ಬಂದಿ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಕೃಷಿ ಪದವೀಧರ ಅಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಸಹಾಯಕ ಕೃಷಿ ಅಧಿಕಾರಿಗಳ ಸಂಘದ ಆಶ್ರಯದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಲಾಯಿತು.
ಕೃಷಿ ಇಲಾಖೆ ತಾಂತ್ರಿಕ ಇಲಾಖೆಯಾಗಿದ್ದು ರೈತರ ಕ್ಷೇಮಾಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದೆ. ಮುಂಗಾರು, ಹಿಂಗಾರು ಬೇಸಿಗೆ ಹಂಗಾಮುಗಳಲ್ಲಿ ಬಿತ್ತನೆ ಬೀಜ ವಿತರಣೆ ಒಳಗೊಂಡ ಎಲ್ಲ ತಾಂತ್ರಿಕ ಮಾಹಿತಿಗಳನ್ನು ರೈತರಿಗೆ ಒದಗಿಸಲಾಗುತ್ತಿದೆ. ಆದರೆ, ಸರ್ಕಾರದ ನೂತನ ಯೋಜನೆಗಳಿಗೆ ತಕ್ಕಂತೆ ಕೃಷಿ ಇಲಾಖೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೊರತೆಯಿದೆ. ಇದರಿಂದ ಒಬ್ಬ ಸಿಬ್ಬಂದಿ 3ರಿಂದ 4ಜನರ ಕೆಲಸ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಕೆಲಸದ ಒತ್ತಡದಿಂದ ಸಿಬ್ಬಂದಿ ಮಾನಸಿಕ, ದೈಹಿಕ ಹಾಗೂ ಆರೋಗ್ಯ ಸಮಸ್ಯೆ ಎದುರಿಸುವಂತಾಗಿದೆ. ಈಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹೊರೆಯಾಗದಂತೆ ಕೃಷಿ ಸಹಾಯಕ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು.
ಅಲ್ಲದೇ ಕೃಷಿ ಇಲಾಖೆಯಿಂದ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಕ್ಷೇತ್ರ ಮಟ್ಟದ ರೈತ ಮಿತ್ರ ನೇಮಕ ಮಾಡಿಕೊಳ್ಳಬೇಕು. ಕಂದಾಯ ಇಲಾಖೆ ನಿರ್ವಹಿಸುತ್ತಿದ್ದ ಬೆಳೆ ಸಮೀಕ್ಷೆ ಯೋಜನೆಯನ್ನು ಕೃಷಿ ಇಲಾಖೆಯಿಂದೆ ತೆಗೆದು ಹಾಕಬೇಕು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳಲ್ಲಿ ಗ್ರೇಡರ್ಗಳನ್ನಾಗಿ ಕೃಷಿ ಇಲಾಖೆ ಸಿಬ್ಬಂದಿ ನಿಯೋಜನೆ ರದ್ದುಗೊಳಿಸಿ, ಕೃಷಿ ಮಾರುಕಟ್ಟೆ ಇಲಾಖೆಯಿಂದಲೇ ನಿರ್ವಹಿಸಲು ಸೂಚನೆ ನೀಡಬೇಕು. ಇದಲ್ಲದೇ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು.
ಇದಕ್ಕೂ ಮುನ್ನ ಶಿವಾಜಿ ನಗರದ ಕೃಷಿ ಇಲಾಖೆ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದರು.