ಬೆಳಗಾವಿ : ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯ. ಸರ್ಕಾರದ ಎಲ್ಲ ಸೌಕರ್ಯ ಮತ್ತು ಸೌಲಭ್ಯಗಳನ್ನು ಜನತೆಗೆ ಸಮರ್ಕವಾಗಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆ ಹಾಗೂ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉತ್ತಮ ಸೌಲಭ್ಯ ಒದಗಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳನ್ನು ವಿಲೀನಗೊಳಿಸಿ ಒಂದೇ ಇಲಾಖೆ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ ಎಂದರು.
ಎನ್‌ಎಬಿಹೆಚ್ ಹಾಗೂ ಎನ್‌ಕ್ಯೂಎಎಸ್ ಗುಣಮಟ್ಟಕ್ಕೆ ತಕ್ಕಂತೆ ಉನ್ನತೀಕರಣಗೊಳಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಬಿಮ್ಸ್ ನಿರ್ದೇಶಕರು ಹಾಗೂ ಜಿಲ್ಲಾ ಸರ್ಜನ್ ಅವರಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳು ಕೂಡ ನಿಯಮಿತವಾಗಿ ಈ ಬಗ್ಗೆ ಪರಿಶೀಲಿಸಬೇಕು. ತಾಲೂಕು ಆಸ್ಪತ್ರೆಗಳಿಗೆ ಹೋಲಿಕೆ ಮಾಡಿದ್ರೆ ಬಿಮ್ಸ್ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ಹೆರಿಗೆ ಆಗುತ್ತಿರುವುದು ಅಂಕಿ-ಅಂಶಗಳಿಂದ ಸ್ಪಷ್ಟವಾಗುತ್ತದೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ತಿಳಿಸಿದರು.
ಕೋವಿಡ್-19 ಪ್ರಕರಣಗಳು ಇಳಿಮುಖವಾಗುತ್ತಿರುವುದರಿಂದ ಕೋವಿಡೇತರ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ನಿಗದಿತ ಕೋವಿಡ್ ಬ್ಲಾಕ್ ಮಾರ್ಪಾಡು ಮಾಡಬೇಕು. ಲಭ್ಯವಿರುವ ಚಿಕಿತ್ಸಾ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಒದಗಿಸುವ ನಿಟ್ಟಿನಲ್ಲಿ ಪ್ರತಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು.
ಪ್ರತಿ ವಿಭಾಗಗಳಿಗೂ ಗುರಿ ನಿಗದಿಪಡಿಸಬೇಕು. ಒಂದು ವೇಳೆ ನಿಗದಿ ಗುರಿ ಸಾಧಿಸದ ವಿಭಾಗಗಳ ಮುಖ್ಯಸ್ಥರ ವಿರುದ್ದ ಕ್ರಮ ಕೈಗೊಳ್ಳಲು ಶಿಫಾರಸು ಮಾಡಬೇಕು. ಎಲ್ಲ ಶಾಲೆಗಳಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಆಯೋಜಿಸಬೇಕೆಂದರು.
ಕಾಮಗಾರಿ ವಿಳಂಬ ; ನೋಟಿಸ್ ನೀಡಲು ಸೂಚನೆ : ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಕಾಮಗಾರಿ ವಿಳಂಬವಾಗಿರುವುದನ್ನು ಪ್ರಶ್ನಿಸಿದ ಅವರು, ಗುತ್ತಿಗೆದಾರನಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದರು. ಬಿಮ್ಸ್ ಆವರಣದಲ್ಲಿ ಆರಂಭಗೊಂಡಿರುವ ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಜಿಲ್ಲೆಯಾದ್ಯಂತ 108 ಆ್ಯಂಬುಲೆನ್ಸ್ ಮೂಲಕ ಆರೋಗ್ಯ ಸೇವೆ ಮೇಲ್ವಿಚಾರಣೆಗೆ ಒಬ್ಬ ಕಾರ್ಯಕ್ರಮಾಧಿಕಾರಿಯನ್ನು ನಿಯೋಜಿಸುವಂತೆ ಸಚಿವರು ನಿರ್ದೇಶನ ನೀಡಿದರು.
ಎನ್‌ಹೆಚ್ಎಂ ಅಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ಪ್ರತಿ ತಿಂಗಳು ಐದನೇ ತಾರೀಖಿನೊಳಗೆ ವೇತನ ಪಾವತಿಸಬೇಕು ಮತ್ತು ನಿಯಮಿತವಾಗಿ ತರಬೇತಿ ಕಾರ್ಯಕ್ರಮಗಳನ್ನು ನಡೆಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಬೇಕು. ವೈದ್ಯರು ಸಮಯಪಾಲನೆ ಮಾಡಬೇಕು. ಕರ್ತವ್ಯದ ಅವಧಿಯಲ್ಲಿ ಲಭ್ಯವಾಗದ ವೈದ್ಯರ ಮೇಲೆ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ಆಸ್ಪತ್ರೆಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಸೂಚನೆ : ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು. ಹಳೆಯ ಅಥವಾ ಹೊಸ ಯಾವುದೇ ಕಟ್ಟಡವಾಗಲಿ ಸ್ವಚ್ಛತೆ ಬಹಳ ಮುಖ್ಯ. ಆಸ್ಪತ್ರೆಗಳ ಗುಣಮಟ್ಟ ಕಟ್ಟಡಗಳಿಂದ ಅಲ್ಲ ಸ್ವಚ್ಛತೆ ಕಾಪಾಡಿಕೊಳ್ಳುವುದರಿಂದ ತಿಳಿಯುತ್ತದೆ ಮತ್ತು ಆರೋಗ್ಯಕರ ವಾತಾವರಣ ಸೃಷ್ಟಿಸಲು ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಆರೋಗ್ಯ ಇಲಾಖೆಯ ನಿರ್ದೇಶಕರಾದ ಓಂಪ್ರಕಾಶ್ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹೆಚ್ ವಿ, ಅಪರ ನಿರ್ದೇಶಕ ಡಾ.ಅಪ್ಪಾಸಾಬ್ ನರಟ್ಟಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉಪಸ್ಥಿತರಿದ್ದರು.