ಬೆಳಗಾವಿ: ನಾಳೆಯಿಂದ ಎರಡು ದಿನಗಳ ಕಾಲ ಮಹಾರಾಷ್ಟ್ರದ ಶಿವಸೇನೆ ನಾಯಕರ ಬೆಳಗಾವಿ ಗಡಿ ಪ್ರವೇಶಕ್ಕೆ ನಿಷೇಧ ಹೇರಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿವಸೇನೆ ಅಧ್ಯಕ್ಷ ವಿಜಯ ದೇವಣೆ ಸೇರಿ ಹಲವು ಮುಖಂಡರ ಗಡಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 9 ರ ಬೆಳಗ್ಗೆ 6 ಗಂಟೆಯವರೆಗೆ ಗಡಿಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಬೆಳಗಾವಿ ಮಹಾನಗರ ಪಾಲಿಕೆ ಎದುರಿನ ಕನ್ನಡ ಧ್ವಜಸ್ತಂಭ ತೆರವಿಗೆ ಆಗ್ರಹಿಸಿ ಮಾರ್ಚ್ 8 ರಂದು ಎಂಇಎಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಧ್ವಜಸ್ತಂಭ ತೆರವು ಮಾಡದಿದ್ದರೆ ಭಗವಾ ಧ್ವಜ ಅಳವಡಿಕೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಎಂಇಎಸ್ ಪ್ರತಿಭಟನೆ ಮಾಡುತ್ತಿದೆ.
ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದ ಇಸ್ರೋ ಮುಖ್ಯಸ್ಥ ಡಾ. ಕೆ.ಶಿವನ್
ಈ ಪ್ರತಿಭಟನೆಯಲ್ಲಿ ಮಹಾರಾಷ್ಟ್ರದ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಪ್ರಚೋದನಾಕಾರಿ ಭಾಷಣ ಮಾಡಿ ಗಡಿಯಲ್ಲಿ ಶಾಂತಿ ಭಂಗ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ನಗರಕ್ಕೆ ಎರಡು ದಿನಗಳ ಕಾಲ ಮಹಾರಾಷ್ಟ್ರ ನಾಯಕರ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.