ಅಥಣಿ : ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸ್ವಕ್ಷೇತ್ರದಲ್ಲಿ ಕೋವಿಡ್-19 ಪ್ರಕರಣ ಪತ್ತೆಯಾಗ್ತಿದ್ದಂತೆಯೇ ಅಧಿಕಾರಿಗಳು ಎಚ್ಚೆತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಗ್ರಾಮಸ್ಥರ ಆರೋಗ್ಯ ತಪಾಸಣೆಗಾಗಿರುವ ಮೊಬೈಲ್ ಫೀವರ್ ಕ್ಲಿನಿಕ್ ಬಸ್ ಸಂಚಾರಕ್ಕೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಎದುರು ಡಿಸಿಎಂ ಲಕ್ಷ್ಮಣ ಸವದಿ ಶನಿವಾರ ಉದ್ಘಾಟಿಸಿದರು.
ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಕಳೆದ 26ರಂದು ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗುತ್ತಿದ್ದಂತೆ, ಜಿಲ್ಲಾಡಳಿತ ಎಚ್ಚೆತ್ತಿದೆ. ನಂದಗಾವ್, ಸವದಿ, ಖವಟ್ಟಗೊಪ್ಪ ಹಾಗೂ ಝುಂಜರವಾಡ ಈ ನಾಲ್ಕು ಗ್ರಾಮಗಳಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಮುಖಾಂತರ ಗ್ರಾಮಸ್ಥರ ಆರೋಗ್ಯ ತಪಾಸಣೆಗೆ ಮುಂದಾಗಿದೆ.
ಈ ಕುರಿತು ಡಿಸಿಎಂ ಸವದಿ ಮಾತನಾಡಿ, ಇದರಲ್ಲಿ ವೈದ್ಯರ ತಂಡ ಕಾರ್ಯನಿರ್ವಹಿಸಲಿದೆ. ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಗ್ರಾಮಸ್ಥರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಡಿಸಿಎಂ ಸವದಿ ತಿಳಿಸಿದರು.