ಬೆಳಗಾವಿ: ಮಳೆಗಾಲದ ಸಮಯದಲ್ಲಿ ಮಹಾರಾಷ್ಟ್ರದಿಂದ ಹೆಚ್ಚಿನ ರೀತಿಯಲ್ಲಿ ನೀರು ಹರಿದು ಬರುತ್ತಿರುವ ಕಾರಣ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಳ್ಳುತ್ತಿದ್ದು, ಇದೇ ವಿಚಾರವಾಗಿ ಇಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಅಲ್ಲಿನ ಜಲಸಂಪನ್ಮೂಲ ಸಚಿವರಾಗಿರುವ ಜಯಂತ್ ಪಾಟೀಲ್ ಜತೆ ಮುಂಬೈನಲ್ಲಿ ಸಭೆ ನಡೆಸಲಿದ್ದು, ಈ ವೇಳೆ ಕೃಷ್ಣ ನದಿ ನೀರು ಹಂಚಿಕೆ ಹಾಗೂ ಭೀಮಾ ನದಿ ವಿಚಾರವಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಕೃಷ್ಣಾ ನದಿಗೆ 4 ಟಿಎಂಸಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಶ್ವತವಾಗಿ ಪರಿಹಾರ ಕೈಗೊಳ್ಳುವ ನಿಟ್ಟಿನಲ್ಲಿ ಮಧ್ಯಾಹ್ನ 3ಕ್ಕೆ ಮಹಾರಾಷ್ಟ್ರದ ನೀರಾವರಿ ಸಚಿವ ಜಯಂತ್ ಪಾಟೀಲ್ ಅವರೊಂದಿಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಆ ಭಾಗಕ್ಕೆ ಸಂಬಂಧಿಸಿದ ಶಾಸಕರು, ಸಂಸದರು, ಸಚಿವರು ಭಾಗಿಯಾಗಲಿದ್ದಾರೆ.
ಮಳೆಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಮಾಹಿತಿ ನೀಡದೇ ಮಹಾರಾಷ್ಟ್ರ ಕೃಷ್ಣ ನದಿಗೆ ನೀರು ಬಿಡುವುದರಿಂದ ಬೆಳಗಾವಿ,ವಿಜಯಪುರ, ಬಾಗಲಕೋಟೆ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಮಾತುಕತೆ ಮಹತ್ವ ಪಡೆದುಕೊಂಡಿದೆ.
ಇದೇ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸುವ ಬಗ್ಗೆ ಜಾರಕಿಹೊಳಿ ಮಾಹಿತಿ ನೀಡಿದ್ದು, ಕೃಷ್ಣ ನದಿ ನೀರು ಹಂಚಿಕೆ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.