ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿರುವುದರಿಂದ ಪರಿಸ್ಥಿತಿ ಗಂಭೀರವಾಗಿದ್ದು, ಜಿಲ್ಲೆಯ ಜನತೆ ಎಚ್ಚರಿಕೆ ವಹಿಸಬೇಕಿದೆ ಎಂದು ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವ ಸುರೇಶ್ ಅಂಗಡಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ. ದೆಹಲಿಯ ನಿಜಾಮುದ್ದೀನ್ ಮರ್ಕಜ್‍ಗೆ ಹೋಗಿ ಬಂದವರು ಸ್ವಯಂ ಪ್ರೇರಿತರಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ತಪಾಸಣೆ ಮಾಡಿಸಿಕೊಳ್ಳದೇ ಹೋದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಳಿಕ ಎಪಿಎಂಸಿ ಮಾರ್ಕೆಟ್, ಆಟೋ ನಗರದ ಮೈದಾನ, ಮಾಲಿನಿ ಸಿಟಿ ಮೈದಾನ, ರವಿವಾರ ಪೇಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ತರಕಾರಿಯನ್ನು ಮಾರಾಟ ಮಾಡುವಂತೆ ತಿಳಿಸಿದರು. ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಪೊಲೀಸರಿಗೆ ಸೂಚನೆ ನೀಡಿದರು.
ಕೊರೊನಾ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಅಧಿಕಾರಿಗಳಿಗೆ, ಪೊಲೀಸರಿಗೆ ಸಾರ್ವಜನಿಕರು ಸಹಕರಿಸಬೇಕಿದೆ. ಪಡಿತರ ಕೇಂದ್ರಗಳಲ್ಲಿ ತಿಂಗಳಾಂತ್ಯಕ್ಕೆ ಗೋಧಿ ವಿತರಿಸಲಾಗುವುದು. ಯಾರಿಗೂ ಸಹ ಆಹಾರದ ಕೊರತೆ ಬರದಂತೆ ಕ್ರಮ ಕೈಗೊಳ್ಳುತ್ತೇವೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.