ಬೆಳಗಾವಿ: ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ರದ್ದುಪಡಿಸುವಂತೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ರೈತರು ಪ್ರತಿಭಟನೆ ಕೈಗೊಂಡ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸುವರ್ಣ ವಿಧಾನಸೌಧದ ಮುಂದೆ ನೂರಾರು ಸಂಖ್ಯೆಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿ, ರಾಷ್ಟ್ರೀಯ ಹೆದ್ದಾರಿಯನ್ನು ಕೆಲ ಹೊತ್ತು ಬಂದ್ ಮಾಡಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದರಿಂದಾಗಿ ನೂರಾರು ಸಂಖ್ಯೆಯಲ್ಲಿ ವಾಹನಗಳು ರಸ್ತೆ ಮಧ್ಯೆ ಅಲ್ಲಲ್ಲಿ ನಿಂತು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ರಸ್ತೆ ತಡೆ ನಡೆಸಿದ ಎಲ್ಲಾ ರೈತರನ್ನು ವಶಕ್ಕೆ ಪಡೆದ ಹಿರೇಬಾಗೆವಾಡಿ ಪೊಲೀಸರು, ನಂತರ ಬಿಡುಗಡೆ ಮಾಡಿದ್ದಾರೆ.
2013ರ ಭೂ ಸ್ವಾದೀನ ಕಾಯ್ದೆಯನ್ನು ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದ್ದು, ಇದು ರೈತರ ಪಾಲಿಗೆ ಮರಣ ಶಾಸನವಾಗಿದೆ. ಈ ಕೂಡಲೇ ರಾಜ್ಯ ಸರ್ಕಾರ ಎಚ್ಚತ್ತುಕೊಂಡು ಭೂ ಸ್ವಾಧೀನ ತಿದ್ದುಪಡಿಯನ್ನು ರದ್ದು ಪಡಿಸಬೇಕು. ಇಲ್ಲದಿದ್ದರೆ ರೈತರ ಆಕ್ರೋಶದ ಮುಂದೆ ಯಾವ ರಾಜಕೀಯ ನಾಯಕರಿಗೂ ಉಳಿಗಾಲವಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.