ಬೆಳಗಾವಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕೇಂದ್ರ ಮತ್ತು ರಾಜ್ಯಗಳ ಸದನದಲ್ಲಿ ಚರ್ಚಿಸದೇ ಮಸೂದೆಯನ್ನು ಅಂಗೀಕರಿಸಲಾಗಿದೆ.ಇದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿ ಜಾರಿಗೆ ತರಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಗೋಕಾಕ್ ನಗರದಲ್ಲಿ ಮಾತನಾಡಿದ ಅವರು, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸದನಗಳಲ್ಲಿ ಚರ್ಚಿಸದೇ ಮಸೂದೆ ಜಾರಿಗೊಳಿಸಿವೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಏನಿದೆ ಎಂಬುವುದು ಯಾರಿಗೂ ಗೊತ್ತಿಲ್ಲ.ಆದರೂ, ನಮ್ಮ ರಾಜ್ಯದಲ್ಲೂ ನೂತನ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ. ಈ ಬಗ್ಗೆ ಸಮಗ್ರವಾಗಿ ಚರ್ಚೆಯಾಗಬೇಕು.ಚರ್ಚೆ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ ಒಳ್ಳೆಯ ಅಂಶಗಳಿದ್ದರೆ ನಡೀತದೆ.ಆದ್ರೆ, ಏನಾದರೂ ನ್ಯೂನ್ಯತೆಗಳಿದ್ದರೇ ಸರಿಪಡಿಸುವ ಕೆಲಸವನ್ನು ಮಾಡಬೇಕು. ಅದನ್ನು ಬಿಟ್ಟು ಏಕಾಏಕಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿರುವ ಕ್ರಮ ಸರಿಯಾಗಿಲ್ಲ.ಇದು ತಪ್ಪು ನಿರ್ಧಾರ. ಈ ಬಗ್ಗೆಯೂ ಕೂಡ ಸದನದಲ್ಲಿ ಧ್ವನಿ ಎತ್ತುತ್ತೇವೆ ಎಂದರು.
ಇದಲ್ಲದೇ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಪಕ್ಷದಿಂದ ನಿರ್ಣಯ ಕೈಗೊಳ್ಳಲಾಗಿದೆ. ಪ್ರಮುಖವಾಗಿ ರೈತರಿಗೆ ಪರಿಹಾರ, ನೆರೆ ಸಂತ್ರಸ್ತರಿಗೆ ಪರಿಹಾರ, ಮೈಸೂರು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ಸೇರಿ ಇನ್ನಿತರ ವಿಷಯಗಳ ಕುರಿತು ಚರ್ಚಿಸುತ್ತೇವೆ. ಒಟ್ಟಾರೆ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.