ಬೆಳಗಾವಿ: ಕೋವಿಡ್ ಸೋಂಕು ತಗುಲಿದ್ದ 9 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ಜಿಲ್ಲೆಯ 8 ಜನರು ಹಾಗೂ ಧಾರವಾಡ ಜಿಲ್ಲೆ ಹುಬ್ಬಳ್ಳಿ ಮೂಲದ ಒಬ್ಬರು ಸೇರಿದಂತೆ 9 ಜನರನ್ನು ಸರ್ಕಾರದ ಮಾರ್ಗಸೂಚಿಯ ಪ್ರಕಾರ ಬಿಡುಗಡೆಗೊಳಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 356 ಸೋಂಕಿತರು ಪತ್ತೆಯಾಗಿದ್ದು, ಅದರಲ್ಲಿ 303 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 49 ಸಕ್ರಿಯ ಪ್ರಕರಣಗಳಿದ್ದು, ನಾಲ್ವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ಇನ್ನು 9,769 ಜನರು 14 ದಿನದ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. 3,456 ಜನರು14 ದಿನದ ಹೋಮ್ ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 14,360 ಜನರು 28 ದಿನದ ಹೋಮ್ ಕ್ವಾರಂಟೈನ್ ಅವಧಿ ಮುಗಿಸಿದ್ದು, 26,337 ಜನರ ಗಂಟಲು ದ್ರವದ ಮಾದರಿ ಪರೀಕ್ಷೆಯ ವರದಿ ಬರಬೇಕಿದೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.