ಬೆಳಗಾವಿ: ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಕಾರಣಕ್ಕೂ ಆಕ್ಸಿಜನ್ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸದ್ಯಕ್ಕೆ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಕಂಡುಬಂದಿಲ್ಲ. ಆದಾಗ್ಯೂ ತುರ್ತು ಪರಿಸ್ಥಿತಿ ನಿಭಾಯಿಸಲು ಅನುಕೂಲವಾಗುವಂತೆ ನಿರಂತರವಾಗಿ ಆಕ್ಸಿಜನ್ ಲಭ್ಯತೆ ಇರುವಂತೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಿಪ್ಪಾಣಿ ಹಾಗೂ ಬೆಳಗಾವಿಯಲ್ಲಿರುವ ಆಕ್ಸಿಜನ್ ಸರಬರಾಜುದಾರರ ಬಳಿ ಇರುವ ಆಕ್ಸಿಜನ್ ಕಡ್ಡಾಯವಾಗಿ ಮೊದಲು ಜಿಲ್ಲೆಯ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪೂರೈಸಬೇಕು. ಅದೇ ರೀತಿ ಕೊಲ್ಲಾಪುರ ಮತ್ತು ಬಳ್ಳಾರಿಯಿಂದ ಇದುವರೆಗೆ ಪಡೆಯಲಾಗುತ್ತಿದ್ದ ಆಕ್ಸಿಜನ್ ಅನ್ನು ಕೂಡ ಯಥಾ ಪ್ರಕಾರ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು.