ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ 13 ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ 50 ಬಿಜೆಪಿ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಯಾದರು.
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ನೂತನ ಸದಸ್ಯರು ಹಾಗೂ ಕಾಂಗ್ರೆಸ್ಗೆ ಸೇರಿದ ಕಾರ್ಯಕರ್ತರಿಗೆ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಈ ವೇಳೆ ಮಾತನಾಡಿದ ಸತೀಶ್ ಜಾರಕಿಹೊಳಿ, ನೂತನವಾಗಿ ಆಯ್ಕೆಯಾದ ಗ್ರಾಪಂ ಸದಸ್ಯರು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವಂತಹ ಪ್ರಾಮಾಣಿಕ ಕೆಲಸ ಮಾಡುವ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸಬೇಕು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮತ್ತೆ ಪಕ್ಷ ಸಂಘಟನೆ ಮಾಡಿ ಹಳ್ಳಿಯಿಂದ ದಿಲ್ಲಿವರೆಗೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಕೈ ಜೋಡಿಸಿ ಪಕ್ಷಕ್ಕೆ ಬಲ ತುಂಬಬೇಕು ಎಂದರು.