ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲಸಂಗಮ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹುಕ್ಕೇರಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ರ‍್ಯಾಲಿ ಮಾಡುವ ಮೂಲಕ ಪಂಚಮಸಾಲಿ ಸಮಾಜದಿಂದ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆಯುತ್ತಿರುವ ಬೃಹತ್ ಪಂಚಮಸಾಲಿ ಸಮಾವೇಶದಲ್ಲಿ ಕೂಡಲಸಂಗಮ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ 50ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ.
ಈ ಸಮಾವೇಶದಲ್ಲಿ ನಾಯಕರು ಮತ್ತು ಸ್ವಾಮೀಜಿಗಳು ರಾಜ್ಯ ಸರ್ಕಾರಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಅಂತಿಮ ಗಡುವು ನೀಡಲು ಪ್ರಮುಖ ನಿರ್ಧಾರದ ಘೋಷಣೆ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಕುಂಭ ಹೊತ್ತ ಮಹಿಳೆಯರು ಹಾಗೂ ವಾಧ್ಯಮೇಳಗಳೊಂದಿಗೆ ಪ್ರತಿಭಟನಾ ರ‍್ಯಾಲಿ: ಹುಕ್ಕೇರಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ರ‍್ಯಾಲಿ ಪ್ರಾರಂಭ ಆಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಪಂಚಮಸಾಲಿ ಸಮುದಾಯದ ಯುವಕರು, ಮಹಿಳೆಯರು ಭಾಗಿಯಾಗಿದ್ದಾರೆ.
ಈ ವೇಳೆ ಕುಂಭ ಹೊತ್ತ ಮಹಿಳೆಯರು ಹಾಗೂ ವಾಧ್ಯಮೇಳಗಳೊಂದಿಗೆ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗಿಯಾಗಿದ್ದು ತೆರೆದ ಸಾರೋಟಿನಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಕುಳಿತು ಮೆರವಣಿಗೆ ನಡೆಸುತ್ತಿದ್ದಾರೆ. ಬಳಿಕ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಪಂಚಮಸಾಲಿ ಸಮುದಾಯದ ಜಿಲ್ಲೆಯ ನಾಯಕರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಜೆಡಿಎಸ್ ವರಿಷ್ಠ ಹೆಚ್ಡಿಡಿ ಭೇಟಿ.. ಪೂಜೆ ವಿಶೇಷ ಪೂಜೆ ಸಲ್ಲಿಕೆ