ಬೆಳಗಾವಿ: ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಮಹಾನಗರ ಪಾಲಿಕೆ ಇದುವರೆಗೆ ಒಟ್ಟಾರೆ 1,05,190 ರೂ. ದಂಡ ವಿಧಿಸಿದೆ.
ಲಾಕ್ಡೌನ್-3ರ ಸಂದರ್ಭದಲ್ಲಿ ಕಿತ್ತಳೆ ವಲಯದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಬೆಳಿಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲು ಸೂಚಿಸಿದ್ದಾರೆ.
ಬೆಳಗಾವಿ ಮಹಾನಗರದಲ್ಲಿ ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದ್ದು, ಇಂತಹ ಪ್ರಕರಣಗಳು ಕಂಡುಬಂದಾಗ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ.ಹೆಚ್. ತಿಳಿಸಿದ್ದಾರೆ.