ಬೆಳಗಾವಿ: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ ಕನಿಷ್ಠ ಭೀತಿಯೂ ಇಲ್ಲದ ಹಣ್ಣಿನ ವ್ಯಾಪಾರಿಗಳು, ಗ್ರಾಹಕರು ಮಾರ್ಕೆಟ್ ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗುಂಪು ಗುಂಪಾಗಿ ಹಣ್ಣು, ತರಕಾರಿಗಳ ವ್ಯಾಪಾರ ನಡೆಸುತ್ತಿದ್ದಾರೆ.
ಜಿಲ್ಲೆಯ ಗಾಂಧಿನಗರವು ಹಣ್ಣಿನ ವ್ಯಾಪಾರಿಗಳು ಹಾಗೂ ಗ್ರಾಹಕರಿಂದ ತುಂಬಿತುಳುಕುತ್ತಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ತೀವ್ರತೆ ಮತ್ತಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರ, ರಾಜ್ಯದಲ್ಲಿ ಒಂದಷ್ಟು ಕ್ಷೇತ್ರಗಳಿಗೆ ವಿನಾಯಿತಿ ನೀಡಿ ಸಡಿಲಿಕೆ ಮಾಡಿತ್ತು. ಅದನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿರುವ ಜನರು ಸಾವಿನ ಮನೆಯ ಕದ ತಟ್ಟುತ್ತಿದ್ದಾರೆ.
ಬೆಳಗಾವಿ ಜಿಲ್ಲೆ ರಾಜ್ಯದ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಮೂರನೇ ಸ್ಥಾನದಲ್ಲಿದ್ದರೂ ಜನರು ಮಾತ್ರ ಎಚ್ಚರಿಕೆ ವಹಿಸುತ್ತಿಲ್ಲ.ಈ ಹಿನ್ನೆಲೆ ಜಿಲ್ಲಾಡಳಿತ ಲಾಕ್ಡೌನ್ ಸಡಿಲಿಕೆ ಮಾಡದೆ ಮತ್ತಷ್ಟು ಬಿಗಿಗೊಳಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯ.