ಬೆಳಗಾವಿ: ಜಿಲ್ಲೆಯ ಗೋಕಾಕ್‌ನಲ್ಲಿಂದು ನಡೆಯುವ ಪಂಚಮಸಾಲಿ ಬೃಹತ್ ಸಮಾವೇಶದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಮಾತನಾಡಿದರೆ ಪ್ರತಿಭಟನೆ ಮಾಡುವುದಾಗಿ ಸತೀಶ್ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೋಕಾಕ್ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬೃಹತ್ ಸಮಾವೇಶ ನಡೆಯುತ್ತಿದೆ. ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ ನೇತೃತ್ವದಲ್ಲಿ ಐವರು ಡಿವೈಎಸ್‌ಪಿಗಳು, 12 ಸಿಪಿಐಗಳು, 20 ಪಿಎಸ್ಐಗಳು, 31 ಎಸ್ಐ ಹಾಗೂ 400ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಇದಲ್ಲದೇ ಎರಡು ಕೆಎಸ್‌ಆರ್‌ಪಿ ಹಾಗೂ ಎರಡು ಡಿಎಆರ್ ತುಕಡಿಗಳಿವೆ.
ಗೋಕಾಕ್‌ನ ನ್ಯೂ ಇಂಗ್ಲಿಷ್ ಶಾಲೆಯ ಆವರಣದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಸಮಾವೇಶಕ್ಕೂ ಮುನ್ನ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ರ‍್ಯಾಲಿ ನಡೆಯಲಿದೆ. ಮಧ್ಯಾಹ್ನ ಒಂದು ಗಂಟೆಗೆ ಸಂಗೊಳ್ಳಿ ರಾಯಣ್ಣ ವೃತ್ತದಿಂದ ರ‍್ಯಾಲಿ ಆರಂಭವಾಗಲಿದ್ದು ಮಧ್ಯಾಹ್ನ 3 ಗಂಟೆಗೆ ಲಿಂಗಾಯತ ಪಂಚಮಸಾಲಿ ಸಮಾವೇಶ ನಡೆಯಲಿದೆ.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್, ವಿನಯ್ ಕುಲಕರ್ಣಿ ಸೇರಿ ಹಲವರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ಗೋಕಾಕ್ನಲ್ಲಿ ಬೃಹತ್ ಲಿಂಗಾಯತ ಪಂಚಮಸಾಲಿ ಸಮಾವೇಶ.. ಬಸವಜಯ ಮೃತ್ಯುಂಜಯ ಸ್ವಾಮೀಜಿ
ಯತ್ನಾಳ್‌ಗೆ ಎಚ್ಚರಿಕೆ: ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡದಂತೆ ವಿಜಯಪುರ ಶಾಸಕ ಬಸನ ಗೌಡ ಪಾಟೀಲ ಯತ್ನಾಳ್‌ಗೆ ಸತೀಶ್ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ. ಯತ್ನಾಳ್‌ಗೆ ಮಾನಸಿಕ ಅಸ್ವಸ್ಥ ಎಂದಿರುವ ಸತೀಶ್ ಬೆಂಬಲಿಗರು, ಯಡಿಯೂರಪ್ಪ ಹಾಗೂ ವಿಜಯೇಂದ್ರ ಬಗ್ಗೆ ಮಾತನಾಡಿದ ಹಾಗೆ ಗೋಕಾಕ್ನಲ್ಲಿ ಏನಾದ್ರೂ ನಾಟಕ ಮಾಡಿದರೆ, ಗೋಕಾಕ್ ಬಿಟ್ಟು ಹೋಗುವುದು ಕಠಿಣ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.